ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಜಿಲ್ಲಾ ಬಂಜಾರ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತುಮಕೂರು ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ನಾರಾಯಣ್ ನಾಯ್ಕ ಡಿ. ತಿಳಿಸಿದ್ದಾರೆ.
ಜಿಲ್ಲಾ ಬಂಜಾರ ಭವನದ ಉದ್ಘಾಟನೆಗೆ ಸಂಬಂಧಿಸಿದಂತೆ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸುಂದರ ಬಂಜಾರ ಭವನದ ಜೊತೆಗೆ ಜಿಲ್ಲಾ ಬಂಜಾರ ಸಂಘದ ಕೇಂದ್ರ ಕಚೇರಿಯ ಉದ್ಘಾಟನೆಯೂ ಇದೇ ಸಂದರ್ಭದಲ್ಲಿ ನಡೆಯಲಿದೆ. ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದ ಬಂಜಾರ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಂಜಾರ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಬಿ., ಉಪಾಧ್ಯಕ್ಷ ಕುಬೇಂದ್ರನಾಯ್ಕೆ ಎಲ್. ಮಾತನಾಡಿದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಇಂದಿರಾ ದೇನಾ ನಾಯ್ಕ್ ಸೇರಿದಂತೆ ಅನೇಕ ಸಮುದಾಯ ಮುಖಂಡರು ಹಾಗೂ ಯುವಕರು ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


