ತುಮಕೂರು: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಎಐಡಿಎಸ್ ಓ ತುಮಕೂರು ಜಿಲ್ಲಾ ಸಮಿತಿ ಆರೋಪಿಸಿದೆ.
ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ.( ಗಣಿಬಾಧಿತ ಜಿಲ್ಲೆಗಳಲ್ಲಿ 100, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 200 ಹಾಗೂ ಇತರೆ ಭಾಗದಲ್ಲಿ 500) ದಿ. 15/10/2025ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಆದೇಶಿಸಲಾಗಿದೆ ಎಂದು ಅವರು ಹೇಳಿದರು.
ಈ ಯೋಜನೆಯನ್ನು Pilot Project ಅಡಿ ಜಾರಿಗೊಳಿಸಲು ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ, 77 ವಿದ್ಯಾರ್ಥಿಗಳಿರುವ ಹೊಡಿಕೆ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, 82 ವಿದ್ಯಾರ್ಥಿಗಳಿರುವ ಕನ್ನಿ ದೊಡ್ಡಿ ಶಾಲೆ, 31 ವಿದ್ಯಾರ್ಥಿಗಳಿರುವ ಅಮ್ಮಳ್ಳಿ ದೊಡ್ಡಿ ಶಾಲೆ , 100 ವಿದ್ಯಾರ್ಥಿಗಳಿರುವ ಸಂತೆಮೊಗೇನಹಳ್ಳಿ ಶಾಲೆ, 20 ವಿದ್ಯಾರ್ಥಿಗಳಿರುವ ಮೊಗೇನಹಳ್ಳಿ ದೊಡ್ಡಿ, 80 ವಿದ್ಯಾರ್ಥಿಗಳಿರುವ ಸುಣ್ಣಘಟ್ಟ ಶಾಲೆಗಳನ್ನು ಹೊಂಗನೂರಿನ KPSಗೆ ತುರ್ತಾಗಿ ವಿಲೀನಗೊಳಿಸಿ ಕ್ರಮಕೈಗೊಳ್ಳಲು ಆದೇಶ (ದಿ: 23/10/2025) ನೀಡಲಾಗಿದೆ. ತತ್ಪರಿಣಾಮ, ಯಾವುದೇ ಕಾರಣಕ್ಕೂ ತಮ್ಮ ಊರಿನ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ ಮತ್ತು ಅದೇ ಶಾಲೆಗಳನ್ನು ಅಭಿವೃದ್ಧಿಪಡಿಸಿ ಊರಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಬೇಕೆಂದು ಸುತ್ತ ಹಳ್ಳಿಗಳ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. ಇದೇ ರೀತಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ 40,000ಕ್ಕೂ ಅಧಿಕ ಶಾಲೆಗಳು ವಿಲೀನಗೊಳ್ಳುತ್ತವೆ. ಸಮುದಾಯ, ಹಳ್ಳಿಗಳ ನಡುವಿನ ಶಾಲೆ ಊರು ದಾಟಿ ಪಕ್ಕದೂರಿಗೆ ಹೋಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಇದಿಷ್ಟೇ ಅಲ್ಲದೆ, ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಮತ್ತು ಮಾಧ್ಯಮಗಳೆದುರಿಗೆ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು, ಹೇಳುತ್ತಿರುವ ಮಾತು ಸತ್ಯಕ್ಕೆ ದೂರವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾವ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಬೇಕು ಮತ್ತು ಆ ಶಾಲೆಗೆ ಯಾವ ಯಾವ ಶಾಲೆಗಳನ್ನು ಸೇರಿಸಬೇಕು ಎಂಬುದರ ಪೂರ್ಣ ಪಟ್ಟಿಯನ್ನು ಈಗಾಗಲೇ ಸಿದ್ಧಗೊಳಿಸಲಾಗಿದೆ. ಶಾಲೆಗಳ ಅಭಿವೃದ್ಧಿಯ ಹೆಸರಲ್ಲಿ ರಾಜ್ಯದ ಜನತೆಯನ್ನು ವಂಚಿಸಿ ಬಡ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಸಿದುಕೊಳ್ಳುವ ಸರ್ಕಾರದ ಘೋರ ಹುನ್ನಾರ ಇದಾಗಿದೆ. ಮುಚ್ಚುತ್ತಿರುವ 40,000 ಸರ್ಕಾರಿ ಶಾಲೆಗಳ ಪಟ್ಟಿ ಸಂಪೂರ್ಣ ಪಟ್ಟಿಯನ್ನು ಎಐಡಿಎಸ್ ಓ ನಾಡಿನ ಜನತೆಯ ಮುಂದೆ ಇಟ್ಟು, ಕೆಪಿಎಸ್-ಮ್ಯಾಗ್ನೆಟ್ ಯೋಜನೆಯ ಕರಾಳ ವಾಸ್ತವವನ್ನು ಬಯಲಿಗೆಳೆದಿದೆ! ಈಗ ಸರ್ಕಾರದ ಉತ್ತರವೇನು ಎಂಬುದು ನಾಡಿನ ಪ್ರಶ್ನೆ ಎಂದರು.
ವಿಲೀನದ ನೆಪದಲ್ಲಿ ಮುಚ್ಚುವ ಶಾಲಾ ಕಟ್ಟಡಗಳನ್ನು ಇತರ ಕೆಲಸಗಳಿಗೆ ವಿನಿಯೋಗಿಸಲು ಸರ್ಕಾರವು ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸುವುದಾಗಿ ಹೇಳಿದೆ. ಪ್ರತಿಷ್ಠಿತ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಸರ್ಕಾರಿ ಶಾಲಾ ಕಟ್ಟಡಗಳನ್ನು ಸ್ವಸಹಾಯ ಗುಂಪುಗಳಿಗೆ ನೀಡಲಾಗುವುದೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಒಂದೇ ಒಂದು ಶಾಲೆಯನ್ನು ಮುಚ್ಚದಿದ್ದ ಮೇಲೆ ಸರ್ಕಾರಿ ಶಾಲೆಗಳನ್ನು ಬೇರೆ ಉದ್ದೇಶಕ್ಕೆ ವಿನಿಯೋಗಿಸುವ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ? ಈ ದೇಶದಲ್ಲಿ ಶಿಕ್ಷಣಕ್ಕಾಗಿ ಧ್ವನಿಯೆತ್ತಿದ ಮಹಾನ್ ನವೋದಯ ಚಿಂತಕರಾದ ಈಶ್ವರ್ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಸಾವಿತ್ರಿಬಾಯಿ ಫುಲೆ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳಾದ ಭಗತ್ ಸಿಂಗ್– ನೇತಾಜಿ ಸುಭಾಷ್ ಚಂದ್ರ ಬೋಸ್, ನಮ್ಮ ನಾಡಿನ ಕುವೆಂಪು, ಕುದ್ಮುಲ್ ರಂಗರಾವ್, ಪಂಡಿತ್ ತಾರಾನಾಥ್ ಮುಂತಾದ ಮಹನೀಯರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರವು ಶಿಕ್ಷಣದ ಮೇಲೆ ಪ್ರಹಾರ ನಡೆಸಿದೆ. ಇದರ ವಿರುದ್ಧ ಪ್ರಬಲ ಹೋರಾಟವನ್ನು ಬೆಳೆಸಲು ಮತ್ತು ಎಲ್ಲ ರೀತಿಯ ತ್ಯಾಗಕ್ಕೆ ಸಿದ್ದರಾಗಲು ನಾಡಿನ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆಗೆ ಸರ್ಕಾರವು ಸವಾಲು ಎಸಗಿದೆ. ಇತಿಹಾಸದ ಎಲ್ಲ ಮಹಾನ್ ವ್ಯಕ್ತಿಗಳ ಕರೆಗೆ ಓಗೊಟ್ಟು ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟಕ್ಕೆ ಮುಂದಾಗುವಂತೆ ಎಐಡಿಎಸ್ ಓ ಮುಖಂಡರು ಕರೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


