ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಬೇಡಿಕೆಯ ನಟ ರಾಜ್ ಬಿ.ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಬಹುನಿರೀಕ್ಷಿತ ’45’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಈ ಮಲ್ಟಿಸ್ಟಾರ್ ಸಿನಿಮಾ ಆರಂಭದಿಂದಲೂ ಕುತೂಹಲ ಮೂಡಿಸಿದ್ದು, ಇದೇ ಡಿಸೆಂಬರ್ 25ರಂದು ಕ್ರಿಸ್ಮಸ್ ಹಬ್ಬದಂದು ತೆರೆಗೆ ಬರಲು ಸಿದ್ಧವಾಗಿದೆ.
ಬೆಂಗಳೂರಿನ ವಿದ್ಯಾಪೀಠದ ಬಳಿಯಿರುವ ಡೊಂಕಣ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಬೆಂಗಳೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಟ್ರೇಲರ್ ಬಿಡುಗಡೆಯಾಗಿದ್ದು ವಿಶೇಷ.
100 ಕೋಟಿ ರೂಪಾಯಿ ಬಜೆಟ್ ನಲ್ಲಿ ಎಂ.ರಮೇಶ್ ರೆಡ್ಡಿ ಅವರು ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಅರ್ಜುನ್ ಜನ್ಯ ಅವರು ಮಾತನಾಡಿ, ತಾವು ಈ ಮೂವರು ನಾಯಕರ ಅಭಿಮಾನಿಯಾಗಿ ಸಿನಿಮಾ ನಿರ್ದೇಶನ ಮಾಡಿದ್ದು, ತಮ್ಮ ನಿರ್ದೇಶನದ ಹಿಂದಿನ ಪ್ರೇರಣೆ ಶಿವರಾಜ್ ಕುಮಾರ್ ಎಂದು ತಿಳಿಸಿದರು. ಅಲ್ಲದೆ, ಮರೆತುಹೋಗಿರುವ ಹಿರಿಯರ ಸಂಸ್ಕೃತಿಯ ಒಂದೆಳೆಯನ್ನು ಇಟ್ಟುಕೊಂಡು ಈ ಕಥೆ ಹೆಣೆಯಲಾಗಿದೆ ಎಂದು ಹೇಳಿದರು.
ಶಿವರಾಜ್ ಕುಮಾರ್ ಅವರು ಮಾತನಾಡಿ, ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿದೆ. ನಿರ್ಮಾಪಕ ರಮೇಶ್ ರೆಡ್ಡಿ ಅವರು ಅದ್ದೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. ಈ ಚಿತ್ರದ ಬಿಡುಗಡೆ ನಂತರ ಅರ್ಜುನ್ ಜನ್ಯ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಟ ಉಪೇಂದ್ರ ಅವರು, ತೆರೆ ಮೇಲೆ ಮೂವರು ಸ್ಟಾರ್‌ಗಳಿದ್ದರೆ, ತೆರೆ ಹಿಂದೆ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಮತ್ತು ಛಾಯಾಗ್ರಾಹಕ ಸತ್ಯ ಹೆಗಡೆ ಸೇರಿ ಮೂವರು ಸ್ಟಾರ್ ಗಳಿದ್ದಾರೆ ಎಂದು ಹೊಗಳಿದರು.
ನಟ ರಾಜ್ ಬಿ.ಶೆಟ್ಟಿ, ನಾಯಕ ನಟರ ಸರಳತೆಯನ್ನು ಮೆಚ್ಚಿಕೊಂಡರು ಮತ್ತು ’45’ ಸಿನಿಮಾವು ಪರಭಾಷಾ ಹಾವಳಿಗೆ ಪ್ರತ್ಯುತ್ತರ ನೀಡುವಂತಹ ಒಂದು ದೊಡ್ಡ ಚಿತ್ರವಾಗುವ ಭರವಸೆ ವ್ಯಕ್ತಪಡಿಸಿದರು. ಎಲ್ಲರೂ ಚಿತ್ರಮಂದಿರಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸುವಂತೆ ನಿರ್ಮಾಪಕ ರಮೇಶ್ ರೆಡ್ಡಿ ಮನವಿ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


