ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಸಿದ್ಧ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ ಅಲಿಯಾಸ್ ಮೈಲಾರಿಯನ್ನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಲಾಗಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಮ್ಯೂಸಿಕ್ ಮೈಲಾರಿ ಹಾಡಲು ಬಂದಿದ್ದನು. ಇದೇ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದಲ್ಲದೆ, ಈ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾನೆ ಎಂದು ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ಈ ಸಂಬಂಧ ಡಿಸೆಂಬರ್ 14 ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆ ನಡೆದ ಸ್ಥಳ ಮಹಾಲಿಂಗಪುರ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಮಹಾಲಿಂಗಪುರ ಠಾಣೆಗೆ ವರ್ಗಾಯಿಸಲಾಗಿತ್ತು.
ಪೊಲೀಸ್ ಕಾರ್ಯಾಚರಣೆ: ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ಮೈಲಾರಿಗಾಗಿ ಬಾಗಲಕೋಟೆ ಪೊಲೀಸರು ಮೂರ್ನಾಲ್ಕು ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದರು. ಇಂದು (ಡಿಸೆಂಬರ್ 17) ಬೆಳಿಗ್ಗೆ ಮೈಲಾರಿ ಮಹಾರಾಷ್ಟ್ರದ ಜತ್ತ ಮೂಲಕ ಪರಾರಿಯಾಗಲು ಯತ್ನಿಸುತ್ತಿದ್ದಾಗ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಮಾಹಿತಿ ನೀಡಿ, “ಮೈಲಾರಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಉಳಿದ 6 ಆರೋಪಿಗಳ ವಿರುದ್ಧ ಬೆದರಿಕೆ ಹಾಗೂ ಹಲ್ಲೆ ನಡೆಸಿದ ಆರೋಪವಿದ್ದು, ಅವರ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಪ್ರಮುಖ ಆರೋಪಿ ಮೈಲಾರಿಯನ್ನು ವೈದ್ಯಕೀಯ ಪರೀಕ್ಷೆಯ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


