ಗುಬ್ಬಿ: ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿರುವ ‘ನರೇಗಾ’ (MGNREGA) ಯೋಜನೆಯ ಹೆಸರನ್ನು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಅತ್ಯಂತ ಖಂಡನೀಯ ಎಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಆರ್. ಶ್ರೀನಿವಾಸ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಶಾಸಕರ ಕಚೇರಿಯಲ್ಲಿ ಗುಬ್ಬಿ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮೃತ ಸದಸ್ಯರ ಕುಟುಂಬದವರಿಗೆ ವಿಮೆ ಹಣ ಹಾಗೂ ರಬ್ಬರ್ ಮ್ಯಾಟ್ ವಿತರಿಸಿ ಅವರು ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಜಾರಿಗೆ ಬಂದ ಈ ಯೋಜನೆಯು ಗ್ರಾಮೀಣ ಭಾಗದ ಲಕ್ಷಾಂತರ ಜನರಿಗೆ ಆಸರೆಯಾಗಿದೆ. ಅಂತಹ ಮಹಾನ್ ವ್ಯಕ್ತಿಯ ಹೆಸರನ್ನು ತೆಗೆದುಹಾಕುವುದು ಅವರಿಗೆ ಮಾಡುವ ಅಪಮಾನವಾಗಿದೆ. ಕೇಂದ್ರ ಸರ್ಕಾರ ಯೋಜನೆಯ ಹೆಸರನ್ನು ಬದಲಿಸುವ ಬದಲು, ಕೂಲಿ ದಿನಗಳನ್ನು ಹೆಚ್ಚಿಸುವ ಮೂಲಕ ಬಡವರಿಗೆ ನೆರವಾಗಬೇಕಿತ್ತು ಎಂದು ಅವರು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಪಕ್ಷದ ಶಾಸಕರು ಬಹಿರಂಗ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಹೈಕಮಾಂಡ್ ಸೂಚನೆಯಂತೆ ಎಲ್ಲವೂ ನಡೆಯಲಿದ್ದು, ಅನಗತ್ಯ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಜಗನ್ನಾಥ್, ಸಂಜೀವ್ ಗೌಡ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


