ಬೆಂಗಳೂರು: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ, ವಿಶೇಷವಾಗಿ ಮಹಿಳೆಯರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ಸಭೆ ನಡೆಸಿ ಪೊಲೀಸ್ ಇಲಾಖೆಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.
ಸಂಭ್ರಮಾಚರಣೆಯ ಹೆಸರಿನಲ್ಲಿ ಅತಿರೇಕದ ವರ್ತನೆಗಳು ನಡೆಯದಂತೆ ತಡೆಯಲು ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಸಿಎಂ ಸೂಚಿಸಿದ್ದಾರೆ. ಪ್ರಮುಖವಾಗಿ ರಸ್ತೆಗಳಲ್ಲಿ ‘ವ್ಹೀಲಿಂಗ್’ ಮಾಡುವ ಪುಂಡರ ಮೇಲೆ ತೀವ್ರ ನಿಗಾ ಇರಿಸಲು ಮತ್ತು ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರನ್ನು ಪತ್ತೆಹಚ್ಚಲು ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಮಹಿಳೆಯರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದ್ದು, ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸರ ನಿಯೋಜನೆಗೆ ಸೂಚಿಸಲಾಗಿದೆ. ಸಂಭ್ರಮಾಚರಣೆಯ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಾರ್ವಜನಿಕರು ಶಾಂತಿಯುತವಾಗಿ ಮತ್ತು ಜವಾಬ್ದಾರಿಯುತವಾಗಿ ಹೊಸ ವರ್ಷವನ್ನು ಬರಮಾಡಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


