ಬೆಂಗಳೂರು: ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಖ್ಯಾತ ಬಯೋಕಾನ್ (Biocon) ಕಂಪನಿಯ ಉದ್ಯೋಗಿಯೊಬ್ಬರು ಮಂಗಳವಾರ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ.
ಘಟನೆಯ ವಿವರ: ಮೃತರನ್ನು ಅನಂತ್ ಭಟ್ (35) ಎಂದು ಗುರುತಿಸಲಾಗಿದೆ. ಇವರು ಬಯೋಕಾನ್ ಕಂಪನಿಯಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಮಧ್ಯಾಹ್ನದ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಹಂತ–2ರಲ್ಲಿರುವ ಕಂಪನಿಯ ಕಟ್ಟಡದ ಐದನೇ ಮಹಡಿಯ ಕೆಫೆಟೇರಿಯಾ ಬಾಲ್ಕನಿಯಲ್ಲಿ ಇವರು ನಿಂತಿದ್ದರು. ಆ ಸಮಯದಲ್ಲಿ ಅವರು ತಮ್ಮ ಗೆಳತಿಯೊಂದಿಗೆ ಮಾತನಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ದಿಢೀರನೆ ಅವರು ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ.
ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಬಿದ್ದಿದ್ದಾರೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದ ತಕ್ಷಣ ಅವರನ್ನು ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಹೆಬ್ಬಗೋಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


