ತುಮಕೂರು: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ಉಪವಿಭಾಗ ಮತ್ತು ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಜಾಗೃತಿ ಉಸ್ತುವಾರಿ ಸಮಿತಿ ಸಭೆಗಳನ್ನು ನಡೆಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಜಿಲ್ಲೆಯ ಮಧುಗಿರಿ ಹಾಗೂ ತಿಪಟೂರು ಉಪವಿಭಾಗ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದುಕೊರತೆಗಳ ಕುರಿತು ಜಾಗೃತಿ ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಿ ಸಭೆಗಳಲ್ಲಿ ಸಲ್ಲಿಕೆಯಾಗುವ ದೂರುಗಳನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಜಿಲ್ಲೆಯ ಪ್ರತಿ ಹೋಬಳಿ ಕೇಂದ್ರಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭವನಗಳ ನಿರ್ಮಾಣಕ್ಕಾಗಿ ಜಾಗವನ್ನು ಗುರುತಿಸಿ ಮಾಹಿತಿ ನೀಡುವಂತೆ ಎಲ್ಲ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದರು.
ತುಮಕೂರು ವಿಶ್ವವಿದ್ಯಾಲಯದಲ್ಲಿ ಎಸ್‍ಸಿ/ಎಸ್‍ಟಿ ವಿದ್ಯಾರ್ಥಿಗಳಿಂದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಂತೆ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ದೂರಿನ ಬಗ್ಗೆ ಗಂಭೀರವಾಗಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು. ಅಲ್ಲದೆ, ಪಾವಗಡದ ಸೋಲಾರ್ ಕಂಪನಿಯಲ್ಲಿ ಹೊರಗುತ್ತಿಗೆ ನೌಕರರಿಗೆ ಸರ್ಕಾರ ನಿಗದಿಪಡಿಸಿದ ವೇತನ ನೀಡದ ಕಂಪನಿಗಳ ವಿರುದ್ಧವೂ ತನಿಖೆ ನಡೆಸಲು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ದೌರ್ಜನ್ಯ ಪ್ರಕರಣ ದಾಖಲಾದ ತಕ್ಷಣ ಎಫ್‍ಐಆರ್ ದಾಖಲಿಸಿ, ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಲಾಗುತ್ತಿದೆ. ಪ್ರತಿ ತಿಂಗಳ 2ನೇ ಭಾನುವಾರ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ದಲಿತ ಮುಖಂಡರ ಸಭೆ ನಡೆಸಿ ಕುಂದುಕೊರತೆ ಆಲಿಸಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯ ಎಲ್ಲಾ 330 ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಗ್ರಾಮ ಸಭೆಗಳ ಫೋಟೋ ಮತ್ತು ವಿಡಿಯೋ ಚಿತ್ರೀಕರಣವನ್ನು ಕಡ್ಡಾಯವಾಗಿ ಗ್ರಾಮ ಸ್ವರಾಜ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಎಚ್ಚರಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಮಾತನಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪುರುಷೋತ್ತಮ್, ಮಧುಗಿರಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಿಪಟೂರು ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


