ತಿಪಟೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಪಟೂರು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಿಪಟೂರು, ಚಿಕ್ಕನಾಯಕನಹಳ್ಳಿ ಹಾಗೂ ತುರುವೇಕೆರೆ ತಾಲೂಕುಗಳ ‘ವಿಪತ್ತು ನಿರ್ವಹಣಾ ಪ್ರಾಧಿಕಾರ’ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಯಿಗಳ ಹಾವಳಿ ಮತ್ತು ಸ್ವಚ್ಛತೆ: ಸಾರ್ವಜನಿಕ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದ ನಾಯಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಸ ವಿಲೇವಾರಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಅಂತಾ ಸೂಚನೆ ನೀಡಿದರು.
ದಂಡ ಪ್ರಯೋಗ: ರಸ್ತೆ ಬದಿಗಳಲ್ಲಿ ಕಸ ಹಾಕುವವರಿಗೆ ಮೊದಲು ತಿಳಿವಳಿಕೆ ನೀಡಬೇಕು. ನಿಯಮ ಉಲ್ಲಂಘನೆ ಮುಂದುವರಿಸಿದರೆ ದಂಡ ವಿಧಿಸಿ, ನಂತರವೂ ಕೇಳದಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿನ ಗುಣಮಟ್ಟ: ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಕರ್ತವ್ಯ. ನೀರಿನ ಗುಣಮಟ್ಟವನ್ನು ಕಾಲಕಾಲಕ್ಕೆ ಪರೀಕ್ಷಿಸಿ, ಪ್ರತಿ ತಿಂಗಳ 6ನೇ ತಾರೀಖಿನೊಳಗೆ ತಾಲೂಕು ಆಡಳಿತಕ್ಕೆ ವರದಿ ಸಲ್ಲಿಸುವಂತೆ ತಾಲೂಕು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.
ಜಾತ್ರೆ ಮತ್ತು ಸಾರ್ವಜನಿಕ ಸುರಕ್ಷತೆ: ಮುಂಬರುವ ದಿನಗಳಲ್ಲಿ ನಡೆಯಲಿರುವ ಜಾತ್ರೆ ಹಾಗೂ ಉತ್ಸವಗಳ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕು. ದೇವಸ್ಥಾನ ಸಮಿತಿ ಹಾಗೂ ಗ್ರಾಮದ ಮುಖಂಡರೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಲು ನಿರ್ದೇಶಿಸಲಾಯಿತು.
ಈ ಸಭೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ. ಸುದರ್ಶನ್, ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


