ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾವಿತ ಮಸೂದೆಯ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಸೂದೆಯ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಸರಗೋಡು ಸೇರಿದಂತೆ ಗಡಿ ಜಿಲ್ಲೆಗಳಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯಗೊಳಿಸುವುದರಿಂದ ಕನ್ನಡಿಗರಿಗೆ ತೊಂದರೆಯಾಗುತ್ತದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಅಂತ ತಿಳಿಸಿದ್ದಾರೆ.
ಸಾಂವಿಧಾನಿಕ ಹಕ್ಕುಗಳ ಬಳಕೆ: ಒಂದು ವೇಳೆ ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೆ ತಂದರೆ, ಭಾಷಾ ಅಲ್ಪಸಂಖ್ಯಾತರ ಹಿತರಕ್ಷಣೆಗಾಗಿ ಮತ್ತು ದೇಶದ ಬಹುತ್ವವನ್ನು ಕಾಪಾಡಲು ಕರ್ನಾಟಕ ಸರ್ಕಾರವು ಲಭ್ಯವಿರುವ ಎಲ್ಲಾ ಸಾಂವಿಧಾನಿಕ ಹಕ್ಕುಗಳನ್ನು ಚಲಾಯಿಸಿ ಇದನ್ನು ವಿರೋಧಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.
ನಿಯೋಗದ ಮನವಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕಾಸರಗೋಡು ಕನ್ನಡಿಗರ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಈ ಮಸೂದೆಯಿಂದ ಕಾಸರಗೋಡನ್ನು ಹೊರಗಿಡುವಂತೆ ಒತ್ತಾಯಿಸಲು ಮತ್ತು ರಾಷ್ಟ್ರಪತಿಗಳ ಬಳಿ ನಿಯೋಗ ಕೊಂಡೊಯ್ಯುವಂತೆ ಮನವಿ ಸಲ್ಲಿಸಿದೆ.
ಕನ್ನಡಿಗರ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದ್ದು, ಭಾಷಾ ಅಲ್ಪಸಂಖ್ಯಾತರ ಮೇಲೆ ಯಾವುದೇ ಭಾಷೆಯ ಹೇರಿಕೆಯನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


