ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಸಹಯೋಗದಲ್ಲಿ ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ 2025–26’ರ ಸಮಾರೋಪ ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿ, ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ಇಂತಹ ಮಹತ್ವದ ರಾಜ್ಯಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸುವ ಶಕ್ತಿ ಹಾಗೂ ಸಾಮರ್ಥ್ಯವಿದೆ ಎಂಬುದನ್ನು ಇಡೀ ರಾಜ್ಯಕ್ಕೆ ತಿಳಿಸಿರುವ ಹೆಮ್ಮೆ ನಮಗಿದೆ ಎಂದರು.
ತುಮಕೂರಿನಲ್ಲಿ ಕ್ರೀಡಾಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ 60 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ ಕ್ರೀಡಾಂಗಣದಲ್ಲಿ ಅಭ್ಯಾಸ ಪಡೆದ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕ್ರೀಡಾಭಿವೃದ್ಧಿಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಹಾಕಿ ಕ್ರೀಡಾಂಗಣ ಹಾಗೂ ಟೆನ್ನಿಸ್ ಅಕಾಡೆಮಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಮುಂದಿನ ದಿನಗಳಲ್ಲಿ ತುಮಕೂರು ರಾಜ್ಯದ ಪ್ರಮುಖ ಕ್ರೀಡಾ ಕೇಂದ್ರವಾಗಬೇಕು ಎಂಬ ಗುರಿಯನ್ನು ಹೊಂದಿದ್ದೇವೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರಿ ನೇಮಕಾತಿಯಲ್ಲಿ ಶೇ.2 ಹಾಗೂ ಪೊಲೀಸ್ ಇಲಾಖೆಯಲ್ಲಿ ಶೇ.3 ಮೀಸಲಾತಿ ನೀಡುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ತೊಡಗಿಸಿಕೊಂಡು ಸಾಧನೆ ಮಾಡಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


