ತುಮಕೂರು: ಶಿವಮೊಗ್ಗ ನಗರದ ಭಾರತಿ ನಗರದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿ ತುಮಕೂರಿನಲ್ಲಿ ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು. ಹತ್ಯೆ ಮಾಡಿದ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಜಿ.ಕೆ ಶ್ರೀನಿವಾಸ್, ರಾಜ್ಯದಲ್ಲಿ ಪದೇಪದೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಮೇಲೆ ಹಲ್ಲೆ, ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಕೂಡಲೇ ಸರ್ಕಾರ ಆರೋಪಿಗಳನ್ನು ಬಂಧಿಸಿ ಎನ್ ಕೌಂಟರ್ ಮಾಡುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಹಿಂದೂಪರ ಸಂಘಟನೆಯಲ್ಲಿ ಕೆಲಸ ಮಾಡುವ ಹುಡುಗರು ಬಡ ಹಾಗೂ ಮಧ್ಯಮ ವರ್ಗದ ಕಾರ್ಯಕರ್ತರ ಮೇಲೆ ಪದೇ ಪದೇ ಹತ್ಯೆ ಹಾಗೂ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಂತೆ ಕಠಿಣ ಕ್ರಮ ಕೈಗೊಂಡು ಇಂತಹ ಆರೋಪಿಗಳಿಗೆ ಶೀಘ್ರ ಶಿಕ್ಷೆ ಆಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಜರಂಗದಳದ ಸಂಚಾಲಕ ಜೀವನ್ ಮಾತನಾಡಿ, ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ, ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಶಿವಮೊಗ್ಗ ನಗರದ ಬಜರಂಗದಳದ ಕಾರ್ಯಕರ್ತ ಹರ್ಷ ಸಾವಿಗೆ ಪೊಲೀಸರ ವೈಫಲ್ಯವೇ ಕಾರಣ. ಸರ್ಕಾರ ಕೂಡಲೇ ಎಚ್ಚೆತ್ತು ಕೊಳ್ಳಬೇಕು ಈ ಮೂಲಕ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಇನ್ನು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದ ಕಾರ್ಯಕರ್ತರು, ಮೃತಪಟ್ಟ ಹಿಂದೂಪರ ಕಾರ್ಯಕರ್ತ ಹರ್ಷನಿಗೆ ಮೌನಾಚರಣೆ ಮಾಡಿದರು.
ಪ್ರತಿಭಟನೆಯಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರಾದ ಕುಮಾರ್, ದರ್ಶನ್, ಧನುಷ್ , ದಯಾನಂದ್, ರಾಕೇಶ್, ಕೆ.ಪಿ.ಮಹೇಶ್ ಸೇರಿದಂತೆ ಹಲವು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB