ಗುಬ್ಬಿ: ತಾಲೂಕಿನ ಚೇಳೂರು ಹೋಬಳಿಯ ಬಿದರೆ ಗ್ರಾಮಠಾಣಾ ವ್ಯಾಪ್ತಿಯ ಸಾರ್ವಜನಿಕ ಆಸ್ತಿ ಹಾಗೂ ಪುರಾತನ “ಗಂಗಸ ಕಟ್ಟೆ” (ಗೋಕಟ್ಟೆ) ಒತ್ತುವರಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಿದರೆ ಗ್ರಾಮಕ್ಕೆ ಸೇರಿದ ಗಂಗಸ ಕಟ್ಟೆಯು ಪುರಾತನ ಕಾಲದಿಂದಲೂ ಹಸು, ಎಮ್ಮೆ, ಕುರಿ, ಮೇಕೆ ಸೇರಿದಂತೆ ಸಾಕುಪ್ರಾಣಿಗಳ ಕುಡಿಯುವ ನೀರಿನ ಆಧಾರವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಕಟ್ಟೆಗೆ ಮಣ್ಣು ಸುರಿದು ವಶಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
“ಸಾರ್ವಜನಿಕ ಆಸ್ತಿಯನ್ನು ರಕ್ಷಿಸಬೇಕಾದ ಅಧಿಕಾರಿಗಳು ಒತ್ತುವರಿದಾರರ ಪರವಾಗಿ ನಿಂತಿರುವುದು ವಿಪರ್ಯಾಸ. ಬಿದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮಣ್ಣು ತೆರವುಗೊಳಿಸಲು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ರೈತ ಮುಖಂಡರು ಆರೋಪಿಸಿದರು. ಗುಬ್ಬಿ ತಾಲೂಕಿನಾದ್ಯಂತ ಕೆರೆ-ಕಟ್ಟೆಗಳು ಹಾಗೂ ಗುಂಡು-ದೋಪುಗಳು ಒತ್ತುವರಿಯಾಗುತ್ತಿದ್ದರೂ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಅವರು ಕಿಡಿಕಾರಿದರು.
ಪ್ರಾಣಿ ಸಂಕುಲದ ರಕ್ಷಣೆಗಾಗಿ ಈ ಗೋಕಟ್ಟೆಯನ್ನು ಸಾರ್ವಜನಿಕ ವಲಯಕ್ಕೆ ಉಳಿಸಿಕೊಡಬೇಕು ಮತ್ತು ಕರ್ತವ್ಯ ನಿರ್ಲಕ್ಷ್ಯ ತೋರಿದ ಪಿಡಿಒ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ತಹಶೀಲ್ದಾರ್ ಆರತಿ ಬಿ. ಅವರ ಮುಖೇನ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಇದೇ ವೇಳೆ ತಾಲೂಕು ಅಧ್ಯಕ್ಷ ವೆಂಕಟೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಲೋಕೇಶ್, ಶಿವಕುಮಾರ್, ನಾಗರಾಜ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ವರದಿ: ಚೇತನ್ ಗೌಡ, ಗುಬ್ಬಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


