ಬೆಂಗಳೂರಿನಲ್ಲಿ ಮನೆಗೆಲಸಕ್ಕೆ ಸೇರಿಕೊಂಡು ಮಾಲೀಕರ ವಿಶ್ವಾಸ ಗಳಿಸಿ, ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದ ನೇಪಾಳಿ ದಂಪತಿಯ ಪ್ರಕರಣವೊಂದು ಈಗ ಬೆಳಕಿಗೆ ಬಂದಿದೆ. ಈ ಸಂಬಂಧ ಮಾರತಹಳ್ಳಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
ದಿನೇಶ್ ಮತ್ತು ಕಮಲ (ಅಥವಾ ಸಲೀನಾ) ಎಂಬ ನಕಲಿ ಹೆಸರುಗಳನ್ನು ಬಳಸಿಕೊಂಡು ಈ ದಂಪತಿ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ನಕಲಿ ಗುರುತಿನ ಚೀಟಿಗಳನ್ನು ನೀಡಿ ಮಾಲೀಕರನ್ನು ನಂಬಿಸಿದ್ದ ಇವರು, ಸಂಚು ರೂಪಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಬಂಗಾರವನ್ನು ಹೊತ್ತೊಯ್ದಿದ್ದಾರೆ. ತನಿಖೆಯ ವೇಳೆ ಈ ಜೋಡಿಯು ಈ ಹಿಂದೆ ಮಹಾರಾಷ್ಟ್ರದ ಪುಣೆಯಲ್ಲಿಯೂ ಇದೇ ರೀತಿಯ ಕೃತ್ಯ ಎಸಗಿರುವುದು ತಿಳಿದುಬಂದಿದೆ. ಅಲ್ಲಿನ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರ ಮನೆಯಲ್ಲಿ ಸುಮಾರು 16 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕಳವು ಮಾಡಿದ್ದರು.
ಪ್ರಸ್ತುತ ಆರೋಪಿಗಳು ನೇಪಾಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಸೆರೆಹಿಡಿಯಲು ಪೊಲೀಸರು ಮುಂಬೈ, ಕೋಲ್ಕತ್ತಾ ಮತ್ತು ನೇಪಾಳದ ಗಡಿ ಭಾಗಗಳಲ್ಲಿ ಏಳು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಕಲಿ ದಾಖಲೆ ನೀಡಿ ಕೆಲಸಕ್ಕೆ ಸೇರುವವರ ಬಗ್ಗೆ ಸಾರ್ವಜನಿಕರು ಎಚ್ಚರದಿಂದಿರಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


