ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ವಿಕಸಿತ ಭಾರತ್ ಗ್ರಾಮೀಣ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (VB-G RAM G) ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ಯುಪಿಎ ಸರ್ಕಾರದ ಅವಧಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸರ್ಕಾರ ವಿಧಾನಸಭೆಯಲ್ಲಿ ಮಂಗಳವಾರ ಮಹತ್ವದ ನಿರ್ಣಯ ಮಂಡಿಸಿದೆ.
ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ಹೊಸ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯು ಫೆಡರಲ್ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವಂತಿದೆ ಎಂದು ಸಿಎಂ ಪ್ರತಿಪಾದಿಸಿದರು.
ಪಂಚಾಯತ್‌ಗಳ ಅಧಿಕಾರ ಕಡಿತ: ಈ ಕಾಯ್ದೆಯು ವಿಕೇಂದ್ರೀಕರಣ ತತ್ವಕ್ಕೆ ವಿರುದ್ಧವಾಗಿದ್ದು, ಗ್ರಾಮ ಪಂಚಾಯತ್‌ಗಳ ಸ್ವಾಯತ್ತತೆ ಮತ್ತು ಅಧಿಕಾರವನ್ನು ಕಸಿದುಕೊಳ್ಳುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಆರ್ಥಿಕ ಹೊರೆ: ಹೊಸ ವ್ಯವಸ್ಥೆಯು ರಾಜ್ಯದ ಖಜಾನೆಗೆ ಅನಗತ್ಯ ಹೊರೆಯಾಗಲಿದೆ ಎಂದು ಸರ್ಕಾರ ದೂರಿದೆ.
ಮನರೇಗಾ ಅಗತ್ಯ: ಗ್ರಾಮೀಣ ಬಡವರ ಬದುಕಿಗೆ ‘ಸಂಜೀವಿನಿ’ಯಂತಿದ್ದ ಮನರೇಗಾ ಯೋಜನೆಯನ್ನು ಅದರ ಮೂಲ ಸ್ವರೂಪದಲ್ಲಿಯೇ ಮತ್ತೆ ಜಾರಿಗೆ ತರಬೇಕು ಎಂದು ಸದನವು ಕೇಂದ್ರವನ್ನು ಒತ್ತಾಯಿಸಿದೆ.
ಸದನದಲ್ಲಿ ಗದ್ದಲ: ಸಿಎಂ ಸಿದ್ದರಾಮಯ್ಯ ಅವರು ನಿರ್ಣಯ ಮಂಡಿಸುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. “ಇದು ಸದನದ ನಿರ್ಣಯವಲ್ಲ, ಕಾಂಗ್ರೆಸ್ ಪಕ್ಷದ ನಿರ್ಣಯ” ಎಂದು ಘೋಷಣೆಗಳನ್ನು ಕೂಗಿದರು. ಬಿಜೆಪಿಯ ಆಕ್ಷೇಪದ ನಡುವೆಯೂ ಮುಖ್ಯಮಂತ್ರಿಗಳು ನಿರ್ಣಯವನ್ನು ಓದಿದರು ಮತ್ತು ಈ ಕುರಿತು ಚರ್ಚೆ ನಡೆಸಲು ವಿರೋಧ ಪಕ್ಷದವರಿಗೆ ಅವಕಾಶವಿರುವುದಾಗಿ ತಿಳಿಸಿದರು.
ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸಲು ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲು ಈ ಹೋರಾಟ ಅನಿವಾರ್ಯ ಎಂದು ರಾಜ್ಯ ಸರ್ಕಾರ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


