ಬೀದರ್: ವೇಶ್ಯಾವಾಟಿಕೆ ಮಾಡುವಂತೆ ಗಂಡನ ಮನೆಯವರು ನೀಡುತ್ತಿದ್ದ ಮಾನಸಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಡೆದಿದೆ. ೨೨ ವರ್ಷದ ಅಂಜನಾಬಾಯಿ ಶೇಖರ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಮೃತಳ ತಂದೆ ವಿಜಯ್ ಕುಮಾರ್ ಅವರು ನೀಡಿದ ದೂರಿನ ಪ್ರಕಾರ, ಅಂಜನಾಬಾಯಿಗೆ ಕಳೆದ ಮೂರು ವರ್ಷಗಳ ಹಿಂದೆ ಶೇಖರ್ ಎಂಬುವವರ ಜೊತೆ ವಿವಾಹವಾಗಿತ್ತು. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ಅತ್ತೆ ಅರುಣಾಬಾಯಿ ಮತ್ತು ಮಾವ ಚಂದ್ರಕಾಂತ ಅವರು ಅಂಜನಾಬಾಯಿಗೆ ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಗಂಡನ ಮನೆಯವರ ನಿರಂತರ ಕಿರುಕುಳವನ್ನು ಸಹಿಸಲಾರದೆ ಅಂಜನಾಬಾಯಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತಳ ಪತಿ ಶೇಖರ್ ಪಾಟೀಲ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮಹಿಳೆಯರ ಸುರಕ್ಷತೆಯ ಬಗ್ಗೆ ಸಮಾಜದಲ್ಲಿ ಆತಂಕ ಮೂಡಿಸಿರುವ ಈ ಘಟನೆ ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


