ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಔಷಧಗಳ ದಾಸ್ತಾನು ಖಾಲಿಯಾಗಿದ್ದು, ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ಯಾರಾಸಿಟಾಮಾಲ್ ಸೇರಿದಂತೆ ಸುಮಾರು 800ಕ್ಕೂ ಹೆಚ್ಚು ಅಗತ್ಯ ಔಷಧಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲ. ಅಪಘಾತವಾದರೆ ಕಟ್ಟಲು ಬ್ಯಾಂಡೇಜ್ ಕೂಡ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳ ನಿರ್ವಹಣಾ ಹಣದಲ್ಲೇ ಔಷಧ ಖರೀದಿಸುವಂತೆ ಸೂಚಿಸಿರುವುದು ಸರ್ಕಾರದ ಅಸಹಾಯಕತೆಯನ್ನು ತೋರಿಸುತ್ತದೆ ಅಂತ ಆರೋಪಿಸಿದರು.
ಆರೋಗ್ಯ ಇಲಾಖೆ ನಿರ್ಲಕ್ಷ್ಯ: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಆರೋಗ್ಯ ಇಲಾಖೆಯ ಬಜೆಟ್ ನಲ್ಲಿ ಶೇ. 30ರಷ್ಟು ಕಡಿತ ಮಾಡಲಾಗಿದೆ. ಇದರಿಂದಾಗಿ ಜನಸಾಮಾನ್ಯರಿಗೆ ಸಿಗಬೇಕಾದ ಕನಿಷ್ಠ ವೈದ್ಯಕೀಯ ಸೌಲಭ್ಯಗಳೂ ಇಲ್ಲದಂತಾಗಿದೆ ಎಂದು ಅವರು ದೂರಿದರು.
ಶಾಸಕರ ವಿದೇಶ ಪ್ರವಾಸ: ಒಂದು ಕಡೆ ಜನರಿಗೆ ಔಷಧ ನೀಡಲು ಹಣವಿಲ್ಲ ಎಂದು ಹೇಳುವ ಸರ್ಕಾರ, ಮತ್ತೊಂದೆಡೆ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದೆ. ರಾಜ್ಯದಲ್ಲಿ ಜನರು ಸಾರಿಗೆ ಸೌಲಭ್ಯವಿಲ್ಲದೆ ಪರದಾಡುತ್ತಿದ್ದರೆ, ಶಾಸಕರು ಎಮಿರೇಟ್ಸ್ ವಿಮಾನದಲ್ಲಿ ಐಷಾರಾಮಿ ಪ್ರವಾಸ ಮಾಡುತ್ತಿರುವುದು ಯಾವ ನ್ಯಾಯ? ಎಂದು ಅವರು ಪ್ರಶ್ನಿಸಿದರು.
ಟೆಂಡರ್ ವಿಳಂಬ: ಔಷಧ ಖರೀದಿಯ ಟೆಂಡರ್ ಪ್ರಕ್ರಿಯೆಯನ್ನು ಮಾರ್ಚ್‌ವರೆಗೆ ಮುಂದೂಡಲಾಗಿದೆ. ಅಂದರೆ ಮೇ ಅಥವಾ ಜೂನ್ ತಿಂಗಳವರೆಗೆ ಆಸ್ಪತ್ರೆಗಳಿಗೆ ಔಷಧ ಪೂರೈಕೆಯಾಗುವುದಿಲ್ಲ. ಅಲ್ಲಿಯವರೆಗೆ ರೋಗಿಗಳ ಜೀವದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಅಶೋಕ್ ಕಿಡಿಕಾರಿದರು.
“ಕಾಂಗ್ರೆಸ್ ಸರ್ಕಾರ ಕೇವಲ ಕಮಿಷನ್ ಬರುವ ಇಲಾಖೆಗಳಿಗೆ ಆದ್ಯತೆ ನೀಡುತ್ತಿದೆ. ಜನರ ಆರೋಗ್ಯ ಕಾಪಾಡುವಲ್ಲಿ ಈ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


