ಬಾಗಲಕೋಟೆ: ನಗರದಲ್ಲಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮುಖ್ಯ ಆರೋಪಿ ಸೇರಿದಂತೆ ಒಟ್ಟು ಎಂಟು ಜನರನ್ನು ಬಂಧಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸಿದ್ಧಾರ್ಥ್ ಗೋಯೆಲ್, “ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಈವರೆಗೆ 8 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಘಟನೆಯ ಮುಖ್ಯ ಆರೋಪಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಏಳು ಮಂದಿ ಸೇರಿದ್ದಾರೆ,” ಎಂದು ತಿಳಿಸಿದರು.
ಗುರುವಾರ ಸಾಯಂಕಾಲ ಶಿವಾಜಿ ಜಯಂತಿ ನಿಮಿತ್ತ ಹಳೆಯ ನಗರದ ಕಿಲ್ಲಾ ಓಣಿಯಲ್ಲಿ ಮೆರವಣಿಗೆ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೆರವಣಿಗೆಯು ಮಸೀದಿಯ ಮುಂಭಾಗ ಸಾಗುತ್ತಿದ್ದ ವೇಳೆ ಕಿಡಿಗೇಡಿಯೊಬ್ಬ ಕಲ್ಲು ತೂರಾಟ ನಡೆಸಿದ್ದಾನೆ. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ಬಿದ್ದಿದ್ದು, ಎಸ್‌ಪಿ ಸಿದ್ಧಾರ್ಥ್ ಗೋಯೆಲ್ ಸೇರಿದಂತೆ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಬಾಗಲಕೋಟೆಯ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 163ರ ಅಡಿಯಲ್ಲಿ (ಹಳೆಯ ಸೆಕ್ಷನ್ 144) ಫೆಬ್ರವರಿ 24ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಸೇರುವುದು, ಮಾರಕಾಸ್ತ್ರಗಳನ್ನು ಹೊರುವುದು ಮತ್ತು ಪೂರ್ವಾನುಮತಿ ಇಲ್ಲದೆ ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.
ತರಕಾರಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ ಹಾಗೂ ಇತರೆ ಹಿಂಸಾಚಾರದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವಿಡಿಯೋ ತುಣುಕುಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಘಟನೆಯಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


