ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು “ದುರದೃಷ್ಟಕರ ಘಟನೆ” ಎಂದು ಬಣ್ಣಿಸಿರುವ ಅವರು, ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಭಾವಚಿತ್ರ ಮೆರವಣಿಗೆಯ ಮೇಲೆ ದುಷ್ಕರ್ಮಿಗಳು ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದಾರೆ. ಈ ಸಂಘರ್ಷದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಸಿಎಂ ಹೇಳಿದ್ದೇನು?
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಕರ್ನಾಟಕದ ಶಕ್ತಿ ಇರುವುದು ಏಕತೆ ಮತ್ತು ಸಹೋದರತ್ವದಲ್ಲಿ. ಜನರು ಯಾವುದೇ ರೀತಿಯ ಪ್ರಚೋದನೆ ಅಥವಾ ಅಪಪ್ರಚಾರಗಳಿಗೆ ಕಿವಿಗೊಡಬಾರದು. ರಾಜ್ಯದಲ್ಲಿ ಶಾಂತಿ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯ ಆರೋಪಿ ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. “ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಲಾಗಿದೆ” ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹಳೆ ಬಾಗಲಕೋಟೆ, ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ಫೆಬ್ರವರಿ 24ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


