ಧಾರವಾಡ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ಸಾವಿರಾರು ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು.
ಧಾರವಾಡದ ಶ್ರೀನಗರದಿಂದ ಆರಂಭವಾದ ಈ ಪ್ರತಿಭಟನೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.85 ಲಕ್ಷ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕು ಮತ್ತು ಉದ್ಯೋಗಾಕಾಂಕ್ಷಿಗಳ ವಯೋಮಿತಿ ಹೆಚ್ಚಿಸಬೇಕು ಎಂಬುದು ಇವರ ಪ್ರಮುಖ ಬೇಡಿಕೆಯಾಗಿದೆ.
ಬಿಜೆಪಿ ನಾಯಕರ ಸಾಥ್: ವಿದ್ಯಾರ್ಥಿಗಳ ಈ ಹೋರಾಟಕ್ಕೆ ಬಿಜೆಪಿ ನಾಯಕರು ಸಾಥ್ ನೀಡಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಅರವಿಂದ ಬೆಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆಯ ವೇಳೆ ಉದ್ಯೋಗಾಕಾಂಕ್ಷಿ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ತಳ್ಳಾಟ–ನೂಕಾಟ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ: ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಆರ್. ಅಶೋಕ್ ಅವರು, “ರಾಜ್ಯ ಸರ್ಕಾರದಲ್ಲಿ ಹಣ ಇಲ್ಲದ ಕಾರಣ ನೇಮಕಾತಿ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದ್ದಾರೆ. ಬಡವರ ಮಕ್ಕಳು ಕೋಚಿಂಗ್ ಪಡೆದು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ, ಆದರೆ ಸರ್ಕಾರ ಮಾತ್ರ ಮೀನಾಮೇಷ ಎಣಿಸುತ್ತಿದೆ” ಎಂದು ಕಿಡಿಕಾರಿದರು.
ನೇಮಕಾತಿ ಪ್ರಕ್ರಿಯೆ ಆರಂಭಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


