ಶಿವಮೊಗ್ಗ: ನಗರದ ಸೂಳೆಬೈಲು ಬಡಾವಣೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಸಹಪಾಠಿಗಳ ನಡುವಿನ ಜಗಳ ಬಿಡಿಸಲು ಹೋದ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಹತ್ಯೆಗೀಡಾಗಿದ್ದಾನೆ.
ಮೃತ ಬಾಲಕನನ್ನು ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಕೇತ್ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಶಾಲೆಯಲ್ಲಿ ವಿಶೇಷ ತರಗತಿ (Special Class) ಮುಗಿಸಿ ಸಂಕೇತ್ ಹೊರಬಂದಿದ್ದಾಗ, ಹೊರಗಡೆ ಕೆಲವು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಗಮನಿಸಿದ ಸಂಕೇತ್, ಜಗಳವನ್ನು ಬಿಡಿಸಲು ಮಧ್ಯಪ್ರವೇಶಿಸಿದ್ದಾನೆ.
ಈ ವೇಳೆ ನಾಲ್ವರು ವಿದ್ಯಾರ್ಥಿಗಳು ಸಂಕೇತ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯ ಸಂದರ್ಭದಲ್ಲಿ ಸಂಕೇತ್‌ನ ಎದೆಯ ಭಾಗಕ್ಕೆ ಬಲವಾದ ಹೊಡೆತ ಬಿದ್ದಿದ್ದು, ಆತ ಸ್ಥಳದಲ್ಲೇ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಯೇ ಆತ ಕೊನೆಯುಸಿರೆಳೆದಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಈಗಾಗಲೇ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ಘಟನೆಯಿಂದ ಸೂಳೆಬೈಲು ಬಡಾವಣೆಯಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಮೃತ ಬಾಲಕನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸಣ್ಣ ವಿಷಯಕ್ಕೆ ನಡೆದ ಗಲಾಟೆ ಇಂದು ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯ ಜೀವ ಬಲಿಪಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


