ಬೆಂಗಳೂರು: ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ರಾಜ್ಯದ ವಿವಿಧೆಡೆ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ನಿಯಮಗಳನ್ನು ಉಲ್ಲಂಘಿಸಿ ಬೀದಿಗಿಳಿಯುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಎಚ್ಚರಿಕೆ ನೀಡಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.
ನಗರದಲ್ಲಿ ಯಾವುದೇ ರೀತಿಯ ಸಭೆ ಅಥವಾ ಪ್ರತಿಭಟನೆ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಅನುಮತಿಯಿಲ್ಲದೆ ನಿಯಮ ಬಾಹಿರವಾಗಿ ಪ್ರತಿಭಟನೆ ನಡೆಸುವವರ ವಿರುದ್ಧ ಈಗಾಗಲೇ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಹೈಕೋರ್ಟ್ ಆದೇಶದಂತೆ ಪ್ರತಿಭಟನೆಗಳು ಕೇವಲ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ನಡೆಯಬೇಕು. ಅದನ್ನು ಬಿಟ್ಟು ಏಕಾಏಕಿ ಬೀದಿಗೆ ಬಂದು ಸಾರ್ವಜನಿಕರಿಗೆ ತೊಂದರೆ ಕೊಡುವುದು ನಿಯಮಬಾಹಿರ. ಅಂತಹವರನ್ನು ಬೀದಿಗೆ ಬರಲು ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಖಮೇನಿ ಹತ್ಯೆ ವಿರೋಧಿಸಿ ಬೆಂಗಳೂರು ಮತ್ತು ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಶಿಯಾ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಿಯಮ ಉಲ್ಲಂಘನೆಯಾದ ಬಗ್ಗೆ ದೂರುಗಳು ಬಂದಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.
ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಪ್ರತಿಭಟನಾ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


