ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದರು. ಇದು ಅವರ ವೃತ್ತಿಜೀವನದ ದಾಖಲೆಯ 17ನೇ ಬಜೆಟ್ ಆಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದ್ದಾರೆ. ಸುಮಾರು 4.48 ಲಕ್ಷ ಕೋಟಿ ರೂಪಾಯಿ ಗಾತ್ರದ ಈ ಬಜೆಟ್‌ನಲ್ಲಿ ಶಿಕ್ಷಣ, ಆರೋಗ್ಯ ಮತ್ತು ಬೆಂಗಳೂರು ಮೂಲಸೌಕರ್ಯಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ.
ಕರ್ನಾಟಕ ಬಜೆಟ್ 2026: ಮುಖ್ಯಾಂಶಗಳು
ದಾಖಲೆಯ ಮಂಡನೆ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ 17ನೇ ಬಜೆಟ್ ಮಂಡಿಸುವ ಮೂಲಕ ಕರ್ನಾಟಕದ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸುಮಾರು 4.48 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಇದಾಗಿದೆ.
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ:
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಸರ್ಕಾರಿ ಕೆಲಸಕ್ಕೆ ಸೇರಬಯಸುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಒಂದು ಬಾರಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.
ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ: ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗಾಗಿ 900 ಕೋಟಿ ರೂ. ಮೀಸಲು. ವಿಜಯಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಡಿಪಿಆರ್ ಸಿದ್ಧಪಡಿಸಲು ನಿರ್ಧಾರ. ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ.
ಗ್ಯಾರಂಟಿ ಯೋಜನೆಗಳು ಮತ್ತು ಇಂದಿರಾ ಕಿಟ್:
ಐದು ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯೂ ದೊಡ್ಡ ಮೊತ್ತದ ಹಣ ಮೀಸಲಿಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಬಡ ಕುಟುಂಬಗಳಿಗೆ “ಇಂದಿರಾ ಆಹಾರ ಕಿಟ್” ವಿತರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ 6,200 ಕೋಟಿ ರೂ. ಹಂಚಿಕೆ ಮಾಡಲಾಗಿದೆ.
ಬೆಂಗಳೂರು ಅಭಿವೃದ್ಧಿ: ಬೆಂಗಳೂರಿನ ರಸ್ತೆಗಳ ವೈಟ್ ಟಾಪಿಂಗ್‌ಗಾಗಿ 1,700 ಕೋಟಿ ರೂ. ಮೀಸಲು. ಹೊರವರ್ತುಲ ರಸ್ತೆ (ORR) ನವೀಕರಣಕ್ಕಾಗಿ 450 ಕೋಟಿ ರೂ. ಘೋಷಣೆ. ಬೆಂಗಳೂರಿನ ದಟ್ಟಣೆ ತಗ್ಗಿಸಲು ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ.
ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಬಿಸಿ?
ಮದ್ಯದ ಮೇಲಿನ ತೆರಿಗೆ ನೀತಿಯಲ್ಲಿ ಬದಲಾವಣೆ ತರಲಾಗಿದ್ದು, ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ. ಇದರಿಂದ ಕೆಲವು ಬ್ರ್ಯಾಂಡ್‌ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಸಾಲದ ಪ್ರಮಾಣ: ರಾಜ್ಯದ ಒಟ್ಟು ಸಾಲದ ಪ್ರಮಾಣ ಏರುತ್ತಿದ್ದು, ಈ ಬಜೆಟ್‌ನಲ್ಲಿ ಸುಮಾರು 1.32 ಲಕ್ಷ ಕೋಟಿ ರೂ. ಸಾಲ ಪಡೆಯಲು ಸರ್ಕಾರ ಉದ್ದೇಶಿಸಿದೆ.
ಶಿಕ್ಷಣ ಮತ್ತು ಸಂಸ್ಕೃತಿ: ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಗಳ ಅತಿ ಹೆಚ್ಚಿನ ಅನುದಾನ ನೀಡಲಾಗಿದೆ. ‘ಜಲ ನಿಧಿ ಕಲ್ಯಾಣಿಗಳ ಪುನಃಶ್ವೇತನ ಯೋಜನೆ’ ಅಡಿಯಲ್ಲಿ ರಾಜ್ಯದ 259 ಪುರಾತನ ಕಲ್ಯಾಣಿಗಳ ಪುನರುಜ್ಜೀವನ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳಿಗೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


