ತುಮಕೂರು: ನಗರದ ಬನಶಂಕರಿಯಲ್ಲಿ ಪೌರಕಾರ್ಮಿಕರೊಬ್ಬರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯಲ್ಲಿದ್ದ ದವಸ ಧಾನ್ಯ ಸೇರಿದಂತೆ ಎಲ್ಲಾ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಅಯ್ಯಪ್ಪ ಎಂಬುವವರ ಮನೆಗೆ ಈ ಅನಾಹುತ ಸಂಭವಿಸಿದೆ. ಘಟನೆ ನಡೆದ ಸಮಯದಲ್ಲಿ ಅಯ್ಯಪ್ಪ ಅವರು ಮನೆಯಿಂದ ಹೊರಗಡೆ ಹೋಗಿದ್ದರು ಎನ್ನಲಾಗಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಮನೆಯಲ್ಲಿದ್ದ ದಿನಬಳಕೆಯ ಸಾಮಗ್ರಿಗಳು ಸಂಪೂರ್ಣವಾಗಿ ನಾಶವಾಗಿವೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಬೆಂಕಿ ಅವಘಡದಿಂದ ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಅಯ್ಯಪ್ಪ ಅವರ ಕುಟುಂಬಕ್ಕೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ತಕ್ಷಣವೇ ಸ್ಪಂದಿಸಬೇಕು ಎಂದು ಸಿಪಿಎಂ (CPM) ಪಕ್ಷ ಒತ್ತಾಯಿಸಿದೆ.
“ಅಯ್ಯಪ್ಪ ಅವರ ಕುಟುಂಬ ಈಗ ಸಂಕಷ್ಟದಲ್ಲಿದೆ. ಅವರಿಗೆ ಕೂಡಲೇ ಆರ್ಥಿಕ ನೆರವು ನೀಡಬೇಕು, ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಬೇಕು ಮತ್ತು ದಿನಬಳಕೆಯ ವಸ್ತುಗಳನ್ನು ಒದಗಿಸಬೇಕು” ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಸೈಯದ್ ಮುಜೀಬ್, ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ ಹಾಗೂ ನಗರ ಕಾರ್ಯದರ್ಶಿ ಎ. ಲೋಕೇಶ್ ಸರ್ಕಾರಕ್ಕೆ ಮತ್ತು ಸ್ಥಳೀಯ ಆಡಳಿತಕ್ಕೆ ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


