ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಪರಿಶಿಷ್ಟ ಪಂಗಡದವರಿಗೆ (ST) ಹೆಚ್ಚಳ ಮಾಡಲಾದ ಶೇ.7ರಷ್ಟು ಮೀಸಲಾತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ವಾಲ್ಮೀಕಿ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.
ಸೋಮವಾರ ನಗರದ ವಾಲ್ಮೀಕಿ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ನಡೆದ ಸಮುದಾಯದ ಮುಖಂಡರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.
ಸರ್ಕಾರವು ಹೆಚ್ಚುವರಿ ಮೀಸಲಾತಿಯನ್ನು ಪರಿಗಣಿಸದೆ, ಹಳೆಯ ಶೇ.3ರಷ್ಟು ಮೀಸಲಾತಿಯ ಅನ್ವಯವೇ 56 ಸಾವಿರ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಮುಖಂಡರು ತೀವ್ರವಾಗಿ ಖಂಡಿಸಿದರು.
ನಾಗಮೋಹನ್ ದಾಸ್ ವರದಿಯಂತೆ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದರೂ, ಕೇಂದ್ರ ಸರ್ಕಾರ ಇದನ್ನು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಲು ವಿಳಂಬ ಮಾಡುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಮುಖಂಡ ಕುಪ್ಪೂರ್ ಶ್ರೀಧರ್ ಆಗ್ರಹಿಸಿದರು.
ಮೀಸಲಾತಿ ಸಮಸ್ಯೆಯನ್ನು ಸರಿಪಡಿಸಿದ ನಂತರವಷ್ಟೇ ನೇಮಕಾತಿ ಪ್ರಕ್ರಿಯೆ ಮುಂದುವರಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 11ರಂದು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಮುಖಂಡರಾದ ಕೆಂಪಹನುಮಯ್ಯ, ರಾಮಚಂದ್ರಪ್ಪ, ನಾಗರಾಜು, ಸರಸ್ವತಿ, ಧನುಷ್, ಸೌಭಾಗ್ಯಮ್ಮ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ಪ್ರಮುಖರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


