ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿ ಏರುತ್ತಿದ್ದಂತೆ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು, ಸದ್ಯ ರಾಜ್ಯದ 183 ಗ್ರಾಮಗಳಲ್ಲಿ ನೀರಿನ ತೀವ್ರ ಅಭಾವ ಎದುರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯದ 21 ಜಿಲ್ಲೆಗಳ 144 ತಾಲ್ಲೂಕುಗಳಲ್ಲಿನ ಒಟ್ಟು 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಪೈಕಿ 31 ಗ್ರಾಮಗಳಿಗೆ ಈಗಾಗಲೇ 96 ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 152 ಗ್ರಾಮಗಳಲ್ಲಿ ನೀರಿನ ಕೊರತೆ ನೀಗಿಸಲು 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಸಾರ್ವಜನಿಕರಿಗೆ ನೀರು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಮಾರ್ಚ್ ತಿಂಗಳಲ್ಲಿ ಸುಮಾರು 1,053 ಕೊಳವೆ ಬಾವಿಗಳನ್ನು ಫ್ಲಷಿಂಗ್ (ಶುಚಿಗೊಳಿಸುವಿಕೆ) ಮತ್ತು ಆಳಗೊಳಿಸುವ ಮೂಲಕ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ಅಭಾವ ಎದುರಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (CEO) ಅಗತ್ಯ ಸೂಚನೆ ನೀಡಲಾಗಿದ್ದು, ತುರ್ತು ಸಂದರ್ಭಗಳಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
2026ರ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬರ ಪರಿಹಾರ ನಿಧಿ ಹಾಗೂ ಇಲಾಖೆಯ ಟಾಸ್ಕ್ ಫೋರ್ಸ್ ಅನುದಾನವನ್ನು ಬಳಸಿಕೊಂಡು ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಗ್ರಾಮ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


