ತಿಪಟೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡಗಳು ಈಗ ತಿಪಟೂರಿನ ಅಡುಗೆಮನೆಗಳಿಗೂ ತಟ್ಟಿವೆ. ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ತಾಲ್ಲೂಕಿನಾದ್ಯಂತ ಸಿಲಿಂಡರ್ ಗಾಗಿ ಗ್ರಾಹಕರು ಪರದಾಡುವಂತಾಗಿದೆ.
ಅಡುಗೆ ಅನಿಲದ ಆನ್ ಲೈನ್ ಮತ್ತು ಫೋನ್ ಕರೆ ಬುಕ್ಕಿಂಗ್ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಬೇಸತ್ತ ಗ್ರಾಹಕರು ನೇರವಾಗಿ ಏಜೆನ್ಸಿಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ.
ಸೋಮವಾರ ಬೆಳಿಗ್ಗೆ 9 ಗಂಟೆಯಿಂದಲೇ ಭಾರತ್ ಗ್ಯಾಸ್ ಸೇರಿದಂತೆ ವಿವಿಧ ಏಜೆನ್ಸಿಗಳ ಮುಂದೆ ನೂರಾರು ಜನರು ಬಿರುಬಿಸಿಲಿನಲ್ಲಿ ಸಾಲು ನಿಂತಿದ್ದರು. ಒಂದು ಸಿಲಿಂಡರ್ ಪಡೆಯಲು ಇಡೀ ದಿನ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.
ಸದ್ಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ, ಮಕ್ಕಳಿಗೆ ಅಡುಗೆ ಸಿದ್ಧಪಡಿಸಿ ಶಾಲೆ–ಕಾಲೇಜಿಗೆ ಕಳುಹಿಸುವುದು ಪೋಷಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಗೃಹಿಣಿಯರು ಗ್ಯಾಸ್ ಕೊರತೆಯಿಂದ ಹೈರಾಣಾಗಿದ್ದಾರೆ.
ಸಿಲಿಂಡರ್ ವಿತರಣೆಯ ವೇಳೆ ಕೆಲವು ಕಡೆಗಳಲ್ಲಿ ₹20 ರಿಂದ ₹50 ರವರೆಗೆ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ.
ಯುದ್ಧದ ನೆಪವೊಡ್ಡಿ ಪೂರೈಕೆಯಲ್ಲಿ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಅಡುಗೆ ಅನಿಲ ಸರಬರಾಜು ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ತಿಪಟೂರಿನ ನಾಗರಿಕರು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


