ಹುಳಿಯಾರು (ಚಿಕ್ಕನಾಯಕನಹಳ್ಳಿ): ಪೊಲೀಸ್ ವಿಚಾರಣೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ನಡೆದಿದೆ. ಪೊಲೀಸರ ಹೊಡೆತದಿಂದಲೇ ಈ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಪೊಲೀಸ್ ಠಾಣೆಯ ಮುಂದೆ ಶವವಿಟ್ಟು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಯಳನಡು ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಇಸ್ಪೀಟ್ ಆಟವಾಡುತ್ತಿದ್ದವರ ಮೇಲೆ ದಾಳಿ ನಡೆಸಿದ್ದ ಹುಳಿಯಾರು ಪೊಲೀಸರು, ಕಾಂತರಾಜು (50) ಸೇರಿದಂತೆ ಐದು ಮಂದಿಯನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದರು. ವಿಚಾರಣೆ ಮುಗಿಸಿ ಹೊರಬಂದ ಕಾಂತರಾಜು ಅವರು ಠಾಣೆಯ ಮುಂದೆಯೇ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಕಾಂತರಾಜು ಅವರ ಸಾವಿಗೆ ಪೊಲೀಸರ ಕಿರುಕುಳ ಮತ್ತು ಹಲ್ಲೆಯೇ ಕಾರಣ ಎಂದು ಗ್ರಾಮಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಪೊಲೀಸರು ಭಯ ಹುಟ್ಟಿಸಿ ಹೊಡೆದಿದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಂಬಂಧಿಕರು ಮತ್ತು ಯಳನಡು ಗ್ರಾಮಸ್ಥರು, ಠಾಣೆಯ ಮುಂದೆ ಜಮಾಯಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಘಟನಾ ಸ್ಥಳಕ್ಕೆ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರು ತಡರಾತ್ರಿ ಹುಳಿಯಾರು ಠಾಣೆಗೆ ಧಾವಿಸಿ ಪರಿಶೀಲನೆ ನಡೆಸಿದರು.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


