ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ಚಟವನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರ ಗಂಭೀರ ಕ್ರಮಕ್ಕೆ ಮುಂದಾಗಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮೊಬೈಲ್ ಬಳಸುವುದನ್ನು ನಿರ್ಬಂಧಿಸಲು ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಈ ವಿಷಯದ ಕುರಿತು ಮಾತನಾಡಿದ ಸಚಿವರು, 16 ವರ್ಷದೊಳಗಿನ ಮಕ್ಕಳ ಮೊಬೈಲ್ ಬಳಕೆಯನ್ನು ನಿಯಂತ್ರಿಸಲು ಮುಂದಿನ ಅಧಿವೇಶನದಲ್ಲಿ ವಿಶೇಷ ಮಾರ್ಗಸೂಚಿಗಳನ್ನು ಮಂಡಿಸಲಾಗುವುದು ಎಂದು ತಿಳಿಸಿದರು.
ಮಕ್ಕಳಲ್ಲಿ ಮೊಬೈಲ್ ವ್ಯಸನ ಹೆಚ್ಚಾಗುತ್ತಿದ್ದು, ಇದು ಅವರ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಕೆಲವು ಪ್ರಕರಣಗಳಲ್ಲಿ ಮಕ್ಕಳು ಆತ್ಮಹತ್ಯೆಯಂತಹ ಕಠಿಣ ನಿರ್ಧಾರಗಳಿಗೂ ಮುಂದಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಈ ನಿಯಮಗಳನ್ನು ರೂಪಿಸುವ ಮುನ್ನ ಇತರ ದೇಶಗಳಲ್ಲಿ ಜಾರಿಯಲ್ಲಿರುವ ಕಾನೂನುಗಳನ್ನು ಸರ್ಕಾರ ಅಧ್ಯಯನ ಮಾಡುತ್ತಿದೆ. ಅಂತರಾಷ್ಟ್ರೀಯ ಮಕ್ಕಳ ಸಂಘಟನೆಗಳ ಸಲಹೆಗಳನ್ನೂ ಪಡೆಯಲಾಗುತ್ತಿದೆ ಅಂತಾ ತಿಳಿಸಿದರು.
ಈ ನಿಯಮಗಳನ್ನು ಜಾರಿಗೆ ತರುವ ಮೊದಲು ಪೋಷಕರ ಒಪ್ಪಿಗೆ ಮತ್ತು ಸಹಕಾರ ಅತ್ಯಗತ್ಯ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಶಾಲೆಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧವಿದ್ದರೂ, ಅದು ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ. ಆದ್ದರಿಂದ ಮಕ್ಕಳನ್ನು ಹಾನಿಕಾರಕ ವಿಷಯಗಳಿಂದ ದೂರವಿಡಲು ಕಾನೂನುಬದ್ಧ ನಿಯಂತ್ರಣದ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


