ಬೀದರ್: ಆನ್ ಲೈನ್ ಗೇಮ್ ಗಳಲ್ಲಿ ಹಣ ಕಳೆದುಕೊಂಡು ಸಾಲದ ಸುಳಿಗೆ ಸಿಲುಕಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಬೀದರ್ ನಲ್ಲಿ ನಡೆದಿದೆ.
ನಗರದ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬ್ರಿಮ್ಸ್) ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಅನಿಷ್ಕಾರ್ ಚವಾಣ್ (21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಬಾಲತ್ಯಾ ತಾಂಡಾ ನಿವಾಸಿಯಾದ ಈತ, ಸೋಮವಾರ ತಡರಾತ್ರಿ ಹಾಸ್ಟೆಲ್ ಕೊಠಡಿಯ ಫ್ಯಾನಿಗೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಮಂಗಳವಾರ ಬೆಳಿಗ್ಗೆ ಈ ವಿಷಯ ಬೆಳಕಿಗೆ ಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಅನಿಷ್ಕಾರ್ ಆನ್ ಲೈನ್ ಗೇಮಿಂಗ್ ಚಟಕ್ಕೆ ಬಿದ್ದಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಟದಲ್ಲಿ ಸುಮಾರು 80 ಸಾವಿರ ರೂಪಾಯಿಗಳನ್ನು ಕಳೆದುಕೊಂಡಿದ್ದ ಎನ್ನಲಾಗಿದ್ದು, ಇದಕ್ಕಾಗಿ ಹಲವರಿಂದ ಸಾಲ ಮಾಡಿದ್ದ ಎನ್ನಲಾಗಿದೆ. ಸಾಲ ನೀಡಿದವರು ಹಣವನ್ನು ಹಿಂತಿರುಗಿಸುವಂತೆ ಒತ್ತಡ ಹೇರುತ್ತಿದ್ದರು. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಅನಿಷ್ಕಾರ್, ಕೊನೆಗೆ ಸಾವಿನ ಹಾದಿ ಹಿಡಿದಿದ್ದಾನೆ ಎಂದು ಶಂಕಿಸಲಾಗಿದೆ.
ಅನಿಷ್ಕಾರ್ ಅವರ ಕುಟುಂಬವೇ ವೈದ್ಯಕೀಯ ಲೋಕಕ್ಕೆ ಹತ್ತಿರವಾಗಿತ್ತು. ಇವರ ಹಿರಿಯ ಸಹೋದರ ಕೂಡ ಬ್ರಿಮ್ಸ್‌ನಲ್ಲಿಯೇ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಇನ್ನು ಹಿರಿಯ ಸಹೋದರಿ ಇದೇ ಸಂಸ್ಥೆಯಲ್ಲಿ ಎಂಬಿಬಿಎಸ್ ಮುಗಿಸಿ, ಪ್ರಸ್ತುತ ಬೆಂಗಳೂರಿನಲ್ಲಿ ಎಂಡಿ (MD) ಮಾಡುತ್ತಿದ್ದಾರೆ. ಮಗ ವೈದ್ಯನಾಗಿ ಬರ್ತಾನೆ ಎಂದು ಕನಸು ಕಂಡಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀದರ್‌ನ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


