ಬೆಂಗಳೂರು: ಶಾಲಾ–ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಹಾಗೂ ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ‘ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ಡಿಜಿಟಲ್ ಬಳಕೆ’ ಕುರಿತಾದ ಹೊಸ ಕರಡು ನೀತಿಯನ್ನು (Draft Policy) ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದು, ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಈ ಕರಡು ನೀತಿಯನ್ನು ಪ್ರಕಟಿಸಿದ್ದಾರೆ. ಸಾರ್ವಜನಿಕರು, ಪೋಷಕರು ಮತ್ತು ಶಿಕ್ಷಣ ತಜ್ಞರು ಮುಂದಿನ 15 ದಿನಗಳ ಒಳಗಾಗಿ ತಮ್ಮ ಸಲಹೆ ಹಾಗೂ ಸೂಚನೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು dd6mhkar@gmail.com ಅಥವಾ ddehospital–hfws@karnataka.gov.in ಗೆ ಇ-ಮೇಲ್ ಮಾಡಬಹುದಾಗಿದೆ.
ಅತಿಯಾದ ಡಿಜಿಟಲ್ ಬಳಕೆಯಿಂದಾಗಿ ಪ್ರತಿ ನಾಲ್ಕು ಮಕ್ಕಳಲ್ಲಿ ಒಬ್ಬರು ಆತಂಕ, ನಿದ್ರಾಹೀನತೆ, ಏಕಾಗ್ರತೆ ಕೊರತೆ ಮತ್ತು ಸಾಮಾಜಿಕವಾಗಿ ಒಂಟಿಯಾಗುವಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯ ಬಗ್ಗೆ ಅರಿವು ಮೂಡಿಸುವುದು. ಶಾಲಾ ಪಠ್ಯದಲ್ಲಿ ಡಿಜಿಟಲ್ ಕ್ಷೇಮ (Digital Wellness) ಮತ್ತು ಸೈಬರ್ ಸುರಕ್ಷತೆಯನ್ನು ಸೇರ್ಪಡಿಸುವುದು. ಶೈಕ್ಷಣಿಕ ಉದ್ದೇಶ ಹೊರತುಪಡಿಸಿ, ಮನರಂಜನೆಗಾಗಿ ಡಿಜಿಟಲ್ ಸಾಧನಗಳ ಬಳಕೆಯನ್ನು ದಿನಕ್ಕೆ ಗರಿಷ್ಠ ಒಂದು ಗಂಟೆಗೆ ಸೀಮಿತಗೊಳಿಸಲು ಶಿಫಾರಸು ಮಾಡಲಾಗಿದೆ. ಡಿಜಿಟಲ್ ವ್ಯಸನದ ಲಕ್ಷಣಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಲು ಶಿಕ್ಷಕರಿಗೆ ವಿಶೇಷ ತರಬೇತಿ ನೀಡುವುದು.
ಈ ನೀತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಮ್ಹಾನ್ಸ್ (NIMHANS) ಮತ್ತು ಶಿಕ್ಷಣ ಇಲಾಖೆಯ ತಜ್ಞರೊಂದಿಗೆ ಸಮಾಲೋಚಿಸಿ ಸಿದ್ಧಪಡಿಸಿದೆ. ಡಿಜಿಟಲ್ ಡಿಟಾಕ್ಸ್: ಶಾಲೆಗಳಲ್ಲಿ ‘ಡಿಜಿಟಲ್ ಡಿಟಾಕ್ಸ್’ (Digital Detox) ಚೌಕಟ್ಟನ್ನು ಜಾರಿಗೆ ತರಲು ಉದ್ದೇಶಿಸಲಾಗಿದ್ದು, ದೈಹಿಕ ಚಟುವಟಿಕೆಗಳು ಮತ್ತು ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಲಾಗಿದೆ.
“ಡಿಜಿಟಲ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಬೇಡ ಎನ್ನಲು ಸಾಧ್ಯವಿಲ್ಲ. ಆದರೆ ಅದರ ಅಸುರಕ್ಷಿತ ಬಳಕೆಯನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ. ವಿದ್ಯಾರ್ಥಿಗಳು, ಪೋಷಕರು ಮತ್ತು ಸರ್ಕಾರ ಒಟ್ಟಾಗಿ ಶ್ರಮಿಸಿದರೆ ಮಾತ್ರ ಆರೋಗ್ಯಕರ ಡಿಜಿಟಲ್ ಪರಿಸರ ನಿರ್ಮಿಸಲು ಸಾಧ್ಯ,” ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


