ಬಾಗಲಕೋಟೆ: ಉಪಚುನಾವಣೆಯ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಮತ್ತು ಅಭಿವೃದ್ಧಿ ಶೂನ್ಯವಾಗಿದೆ ಎಂದು ಟೀಕಿಸಿದರು.
ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ಪರ ಪ್ರಚಾರಕ್ಕೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸೋಮಣ್ಣ, ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿದ್ದರೂ, ರಾಷ್ಟ್ರೀಯ ನಾಯಕರು ಅದನ್ನು ಸರಿಪಡಿಸುತ್ತಾರೆ. ಪಕ್ಷವು ತಾಯಿಯಂತೆ, ದೇಶ ಮತ್ತು ಪಕ್ಷವೇ ನಮಗೆ ಮೊದಲು ಎಂದು ಅವರು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬಂದು ಪ್ರಧಾನಿ ಮೋದಿಯವರ ಕಾರ್ಯವೈಖರಿಯನ್ನು ನೋಡುವಂತೆ ಹಲವು ಬಾರಿ ಹೇಳಿದ್ದೇನೆ, ಆದರೆ ಅವರು ಉಡಾಫೆ ಮಾಡುತ್ತಿದ್ದಾರೆ ಎಂದು ಸೋಮಣ್ಣ ಆರೋಪಿಸಿದರು. ಈ ಸರ್ಕಾರ ಇನ್ನು ಎರಡು ಅಥವಾ ಮೂರು ತಿಂಗಳು ಮಾತ್ರ ಇರಬಹುದು, ಸಿದ್ದರಾಮಯ್ಯನವರು ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಭವಿಷ್ಯ ನುಡಿದರು.
ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೀಡುತ್ತಿರುವ ರೈಲ್ವೆ ಯೋಜನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಅವರು, ಬಾಗಲಕೋಟೆ–ಕುಡಚಿ ಹೊಸ ರೈಲು ಮಾರ್ಗ, ಗದಗ–ವಾಡಿ ಯೋಜನೆ ಹಾಗೂ ಬಾಗಲಕೋಟೆ ರೈಲ್ವೆ ನಿಲ್ದಾಣದ ಆಧುನೀಕರಣಕ್ಕೆ ಮೋದಿಯವರ ಸರ್ಕಾರ ಕೋಟ್ಯಂತರ ರೂಪಾಯಿ ನೀಡಿದೆ ಎಂದು ವಿವರಿಸಿದರು. 2027ರ ವೇಳೆಗೆ ಈ ಭಾಗದ ಬಹುತೇಕ ರೈಲ್ವೆ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಭರವಸೆ ನೀಡಿದರು.
ರಾಜ್ಯ ಸರ್ಕಾರ ಕೇವಲ 2000 ರೂಪಾಯಿ ನೀಡಿ ಜನರ ಮೇಲೆ 6000 ರೂಪಾಯಿ ತೆರಿಗೆ ಹಾಕುತ್ತಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ. ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅಧಿಕಾರಿಗಳ ಕಪಿಮುಷ್ಟಿಯಲ್ಲಿ ಸರ್ಕಾರ ಸಿಲುಕಿದೆ ಎಂದು ದೂರಿದರು.
ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು 2809 ರೈತರು ಸಾವನ್ನಪ್ಪಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಅವರು ಅಂಕಿಅಂಶಗಳ ಸಮೇತ ವಾಗ್ದಾಳಿ ನಡೆಸಿದರು.
ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಭರ್ಜರಿ ಬಹುಮತದಿಂದ ಗೆಲ್ಲಲಿದ್ದಾರೆ ಎಂದು ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


