ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡುವ ಬದಲಿಗೆ ಕೇವಲ ‘ಗ್ರೇಡಿಂಗ್’ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಿಯಮವನ್ನು ಮರುಪರಿಶೀಲಿಸುವಂತೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಭಾಷಾವೈವಿಧ್ಯತೆ, ಜಾಗೃತಿ ಮತ್ತು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಯಲ್ಲಿ ತೃತೀಯ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ಅಂಕಗಳ ಬದಲಿಗೆ ಗ್ರೇಡ್ ನೀಡುವ ನಿರ್ಧಾರದಿಂದ ಈ ವಿಷಯದ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆಯಾಗುವ ಸಾಧ್ಯತೆ ಇದೆ. ಕೇವಲ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದರೆ ವಿದ್ಯಾರ್ಥಿಗಳಲ್ಲಿ ತೃತೀಯ ಭಾಷೆಯನ್ನು ಕಲಿಯುವ ಆಸಕ್ತಿ ಮತ್ತು ಗಂಭೀರತೆ ಕಡಿಮೆಯಾಗಬಹುದು ಎಂಬ ಆತಂಕವನ್ನು ರಾಜ್ಯಪಾಲರು ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಈ ನಿರ್ಧಾರದ ಬಗ್ಗೆ ಪೋಷಕರಲ್ಲಿರುವ ಕಳವಳವನ್ನು ಗಮನಿಸಿರುವ ರಾಜ್ಯಪಾಲರು, ಶಿಕ್ಷಣದ ಗುಣಮಟ್ಟದ ಮೇಲೆ ಇದು ಬೀರುವ ಪರಿಣಾಮಗಳ ಬಗ್ಗೆ ಎಚ್ಚರಿಸಿದ್ದಾರೆ.
ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಶಾಲಾ ಶಿಕ್ಷಣ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ವಿಷಯದ ಬಗ್ಗೆ ಸಮಗ್ರ ಸಮಾಲೋಚನೆ ನಡೆಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರು ಸೂಚಿಸಿದ್ದಾರೆ.
ಈಗಾಗಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ಈ ನಡುವೆ ರಾಜ್ಯಪಾಲರ ಈ ಪತ್ರವು ರಾಜಕೀಯ ಮತ್ತು ಶೈಕ್ಷಣಿಕ ವಲಯದಲ್ಲಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ಸರ್ಕಾರದ ಈ ನಿರ್ಧಾರವನ್ನು ಟೀಕಿಸಿದ್ದು, ಇದು ಕೇವಲ ರಾಜಕೀಯ ಪ್ರೇರಿತ ಕ್ರಮ ಎಂದು ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


