ಶಿರಾ (ತುಮಕೂರು): ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಬೆಳಗಿನ ಜಾವ ಎರಡು ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 32ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗದಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ, ಹಾವೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್‌ನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಪ್ರವೀಣ್ (16) ಮತ್ತು ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಚವಡಿ ಗ್ರಾಮದ ಸಂಗೀತಾ (16) ಎಂದು ಗುರುತಿಸಲಾಗಿದೆ. ಮೃತರಿಬ್ಬರೂ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಅಪಘಾತದಲ್ಲಿ ಸುಮಾರು 32 ಮಂದಿ ಗಾಯಗೊಂಡಿದ್ದು, ಅವರಲ್ಲಿ ಒಂಬತ್ತು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಶಿರಾ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆದ್ದಾರಿಯಲ್ಲಿ ಅಪಘಾತ ನಡೆದ ಕಾರಣ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


