ತಿಪಟೂರು: ತಾಲ್ಲೂಕಿನ ಬಿದರೆಗುಡಿ ಸಮೀಪದ ಬೈರಾಪುರ ಗೇಟ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅರಸೀಕೆರೆ ತಾಲ್ಲೂಕಿನ ಬಿ.ಎಲ್. ಕೊಪ್ಪಲು ಗ್ರಾಮದ ನಿವಾಸಿ ವಿಜಯಕುಮಾರ್ (26) ಎಂಬುವರು ಮೃತಪಟ್ಟಿದ್ದಾರೆ.
ಮೃತ ವಿಜಯಕುಮಾರ್ ಅವರು ತಿಪಟೂರು ನಗರದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿಕೊಂಡು ಶುಕ್ರವಾರ ರಾತ್ರಿ ತಮ್ಮ ಬೈಕ್‌ನಲ್ಲಿ ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ, ಬೈರಾಪುರ ಗೇಟ್ ಬಳಿ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ವಿಜಯಕುಮಾರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿರುವುದೇ ಈ ಅಪಘಾತಕ್ಕೆ ಮುಖ್ಯ ಕಾರಣ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಅಪೂರ್ಣವಾಗಿರುವುದರಿಂದ ಏಕಮುಖ ಸಂಚಾರ ವ್ಯವಸ್ಥೆ ಜಾರಿಯಲ್ಲಿದ್ದು, ವಾಹನ ಸವಾರರಿಗೆ ರಸ್ತೆಯ ಅರಿವಾಗುತ್ತಿಲ್ಲ. ಅಲ್ಲದೆ, ಸರಿಯಾದ ಸೂಚನಾ ಫಲಕಗಳಿಲ್ಲದಿರುವುದು ಮತ್ತು ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಈ ಭಾಗದಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


