ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ದೇಶದಲ್ಲಿ ಎಲ್‌ಪಿಜಿ (LPG) ಕೊರತೆ ಉಂಟಾಗುತ್ತಿದ್ದು, ಕೇಂದ್ರ ಸರ್ಕಾರ ತಕ್ಷಣವೇ ತನ್ನ ವಿದೇಶಾಂಗ ನೀತಿಯಲ್ಲಿ ಬದಲಾವಣೆ ತಂದು ಇತರ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಲು ಮುಂದಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಎಲ್ ಪಿಜಿ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸಾಮಾನ್ಯ ಜನರ ಮೇಲೆ ಹೊರೆ: ಗ್ಯಾಸ್ ಕೊರತೆಯಿಂದಾಗಿ ಈಗಾಗಲೇ ಸಣ್ಣ ಹೋಟೆಲ್ ಗಳು ಮತ್ತು ಅನೇಕ ಕಾರ್ಖಾನೆಗಳು ಮುಚ್ಚುವ ಹಂತಕ್ಕೆ ತಲುಪಿವೆ. ಇದು ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಮಧ್ಯಪ್ರಾಚ್ಯದ ಯುದ್ಧದ ಪರಿಸ್ಥಿತಿಯಿಂದಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಆದ್ದರಿಂದ ಸರ್ಕಾರವು ಪರ್ಯಾಯ ಮಾರ್ಗಗಳನ್ನು ಹುಡುಕಬೇಕು ಮತ್ತು ಇತರ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಿ ಅನಿಲ ಆಮದು ಮಾಡಿಕೊಳ್ಳುವ ಮೂಲಕ ಸಮಸ್ಯೆಯನ್ನು ಪರಿಹರಿಸಬೇಕು ಅಂತಾ ಅವರು ಒತ್ತಾಯ ಮಾಡಿದರು.
ಈ ಗಂಭೀರ ವಿಷಯದ ಬಗ್ಗೆ ನಿಯಮ 176ರ ಅಡಿಯಲ್ಲಿ ಸಂಸತ್ತಿನಲ್ಲಿ ಚರ್ಚಿಸಲು ತಾವು ಸಮಯ ಕೋರಿದ್ದರೂ, ಅದಕ್ಕೆ ಸರ್ಕಾರ ಅವಕಾಶ ನೀಡಿಲ್ಲ ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ಈ ವಿಷಯವನ್ನು ಎರಡು ಬಾರಿ ಪ್ರಸ್ತಾಪಿಸಿದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ಅನಿಲ ಕೊರತೆಯನ್ನು ಸರಿಯಾಗಿ ನಿರ್ವಹಿಸದಿದ್ದರೆ ದೇಶದ ಆರ್ಥಿಕತೆಗೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ ಎಂದು ಅವರು ಎಚ್ಚರಿಸಿದರು. ಗ್ಯಾಸ್ ಲಭ್ಯವಿಲ್ಲದಿದ್ದರೂ ಇದೆ ಎಂದು ಸುಳ್ಳು ಹೇಳುವ ಬದಲು, ವಾಸ್ತವವನ್ನು ಒಪ್ಪಿಕೊಂಡು ಸರಿಪಡಿಸುವ ಕೆಲಸವಾಗಬೇಕು ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


