ಬೆಂಗಳೂರು: ರಾಜ್ಯದ ಮುಂಬರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಲಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ನಡೆಯಲಿರುವ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆಯಾ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ನೀಡಿರುವ ಸ್ಪಂದನೆಯೇ ನಮಗೆ ಶ್ರೀರಕ್ಷೆಯಾಗಲಿದೆ ಎಂದು ಹೇಳಿದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂಬುದೆಲ್ಲಾ ಕೇವಲ ಊಹಾಪೋಹ, ಅಲ್ಲಿಯೂ ನಾವು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಅವರು ತಿಳಿಸಿದರು.
ಇದೇ ವೇಳೆ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆಯ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಭಾರಿ ಆರ್ಥಿಕ ಅನ್ಯಾಯವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ದಕ್ಷಿಣದ ರಾಜ್ಯಗಳ ತೆರಿಗೆ ಹಣವನ್ನು ಉತ್ತರದ ರಾಜ್ಯಗಳಿಗೆ ಕೊಂಡೊಯ್ಯುವ ಹುನ್ನಾರ ಇದು. ಈ ಬಗ್ಗೆ ದಕ್ಷಿಣದ ರಾಜ್ಯಗಳು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಮುಂದಿನ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ಸಚಿವ ಜಿ. ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸುರೇಶ್, “ಗೃಹ ಸಚಿವರು ಅಧಿಕೃತವಾಗಿ ಆ ಹೇಳಿಕೆ ನೀಡಿದ್ದಾರೆ, ಅವರು ಹೇಳಿದಂತೆ ಕೇಳಬೇಕಷ್ಟೇ” ಎಂದರು. ತಮ್ಮ ಅಣ್ಣ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೋಡುವ ಆಸೆಯ ಬಗ್ಗೆ ಪ್ರಶ್ನಿಸಿದಾಗ, “ಅದರ ಬಗ್ಗೆ ನಂತರ ಮಾತನಾಡೋಣ. ನಾನೇನು ಆಸೆಯಿಲ್ಲ ಎಂದು ಹೇಳಿಲ್ಲ, ಆದರೆ ಇಂದೇ ಸಿಎಂ ಆಗುತ್ತಾರೆ ಎಂದೂ ಹೇಳಿಲ್ಲ” ಎಂದು ಮಾರ್ಮಿಕವಾಗಿ ಉತ್ತರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


