ಮಂಡ್ಯ: ಬೆಂಗಳೂರು ಮತ್ತು ಮೈಸೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಶೀಘ್ರದಲ್ಲೇ ಸಿಹಿಸುದ್ದಿ ಸಿಗಲಿದೆ. ಈ ಮಾರ್ಗದ ರೈಲುಗಳ ವೇಗವನ್ನು ಗಂಟೆಗೆ 130 ಕಿ.ಮೀ.ಗೆ ಹೆಚ್ಚಿಸಲಾಗುತ್ತಿದ್ದು, ಇದರಿಂದ ಎರಡೂ ನಗರಗಳ ನಡುವಿನ ಪ್ರಯಾಣದ ಸಮಯ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಶುಕ್ರವಾರ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಬೆಂಗಳೂರು – ಮೈಸೂರು ರೈಲ್ವೆ ಮಾರ್ಗ ಹಾಗೂ ವಿವಿಧ ನಿಲ್ದಾಣಗಳ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಪ್ರಸ್ತುತ ಗಂಟೆಗೆ 110 ಕಿ.ಮೀ ವೇಗದಲ್ಲಿ ಚಲಿಸುತ್ತಿರುವ ರೈಲುಗಳ ವೇಗವನ್ನು 130 ಕಿ.ಮೀ.ಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.
ಮಂಡ್ಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 25 ಕೋಟಿ ರೂ. ಅನುದಾನ ನೀಡಿದ್ದಾರೆ. ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ.
ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸಹಕರಿಸುತ್ತಿಲ್ಲ ಎಂದು ಸೋಮಣ್ಣ ಗಂಭೀರ ಆರೋಪ ಮಾಡಿದ್ದಾರೆ. ಕನಕಪುರ-ಮಳವಳ್ಳಿ ರೈಲ್ವೆ ಮಾರ್ಗಕ್ಕೆ “ನಮ್ಮ ಬಳಿ ಹಣವಿಲ್ಲ, ಈ ಪ್ರಾಜೆಕ್ಟ್ ಬೇಡ” ಎಂದು ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ಅವರು ದೂರಿದ್ದಾರೆ.
ಬೆಂಗಳೂರು–ಚಾಮರಾಜನಗರ ಮತ್ತು ಮೈಸೂರು-ಕುಶಾಲನಗರ ರೈಲ್ವೆ ಯೋಜನೆಗಳಿಗೂ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿಲ್ಲ. ಒಂದು ವೇಳೆ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಗೆ ಸಹಕರಿಸಿದರೆ ಈ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಬದ್ಧವಾಗಿದೆ ಎಂದು ಸೋಮಣ್ಣ ತಿಳಿಸಿದರು.
ಈ ಸಂದರ್ಭದಲ್ಲಿ ಮಂಡ್ಯ ನಗರಕ್ಕೆ ಹೆಚ್ಚಿನ ಬಸ್ ವ್ಯವಸ್ಥೆ ಮತ್ತು ಮೆಮು ರೈಲುಗಳ (MEMU Trains) ಬೇಡಿಕೆಯ ಬಗ್ಗೆಯೂ ಸಚಿವರು ಗಮನಹರಿಸುವುದಾಗಿ ಭರವಸೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


