ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಸಹ ಕಲಾವಿದ ಹರೀಶ್ (40) ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅಪಘಾತ ಸಂಭವಿಸಿದೆ. ಹರೀಶ್ ಅವರು ತಮ್ಮ ಕೆಲಸ ಮುಗಿಸಿಕೊಂಡು ತಡರಾತ್ರಿ ಕುಶಾಲನಗರದಿಂದ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಇವರ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ಹರೀಶ್ ಅವರು ಕನ್ನಡದ ಹಲವು ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಮತ್ತು ಜನಪ್ರಿಯ ಕಿರುತೆರೆ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಮನೆಮಾತಾಗಿದ್ದರು. ಇವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


