ತುಮಕೂರು: ಜಿಲ್ಲೆಯ ವಿವಿಧ ರಸ್ತೆಗಳಲ್ಲಿ ಪದೇ ಪದೇ ಅಪಘಾತ ನಡೆಯುವ ಸ್ಥಳಗಳನ್ನು ಶೀಘ್ರ ಗುರುತಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷಾ ಸಲಹಾ ಸಮಿತಿ ಸಭೆ ನಡೆಸಿದ ಅವರು, ರಸ್ತೆ ಸುರಕ್ಷಾ ದೃಷ್ಟಿಯಿಂದ ಪದೇ ಪದೇ ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸುವಂತೆ ಈ ಹಿಂದಿನ ಸಭೆಯಲ್ಲಿ ತಿಳಿಸಲಾಗಿತ್ತು. ಈ ಕಾರ್ಯ ಇನ್ನೂ ಪೂರ್ಣವಾಗಿಲ್ಲ. ತಕ್ಷಣ ಪೂರ್ಣಗೊಳಿಸಿ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ತುಮಕೂರು ಜಿಲ್ಲೆಯಲ್ಲಿ ಅಪಘಾತಗಳಿಗೆ ಕಾರಣವಾಗಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸುವ ಕುರಿತು ಈಗಾಗಲೇ ಸೂಚನೆ ನೀಡಲಾಗಿದ್ದರೂ, ಕೆಲವು ಸ್ಥಳಗಳಲ್ಲಿ ಇನ್ನೂ ಗುರುತಿಸುವ ಕಾರ್ಯ ಪೂರ್ಣಗೊಂಡಿಲ್ಲ. ಇದರಿಂದ ಇನ್ನೂ ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ತಕ್ಷಣವೇ ಎಲ್ಲಾ ಅಪಘಾತ ಪ್ರದೇಶಗಳನ್ನು ಗುರುತಿಸಿ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮುಂದಿನ ವಾರದೊಳಗೆ ಎಲ್ಲಾ ತಾಂತ್ರಿಕ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವಂತೆ ನಿರ್ದೇಶನ ನೀಡಿದ ಅವರು, ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ.ಅಶೋಕ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಗೋಪಾಲ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಸಾದ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


