ಗುಬ್ಬಿ : ಪಟ್ಟಣದ ಸಮೀಪದ ಎಂ.ಹೆಚ್.ಪಟ್ಟಣ ಗೇಟ್ ಬಳಿ ತಾಂತ್ರಿಕ ದೋಷದಿಂದ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ದೊಡ್ಡ ಅಪಾಯದಿಂದ ಪಾರದ ಘಟನೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ತಿಪಟೂರು ಡಿಪೋದಿಂದ ಪ್ರಯಾಣಿಸುತ್ತಿದ್ದ ಸರ್ಕಾರಿ ಬಸ್ ನ ಅಕ್ಸೆಲ್ ಭಾಗದಲ್ಲಿ ತಾಂತ್ರಿಕ ದೋಷ ಉಂಟಾಗಿ, ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿಯಾಗಿದೆ. ತಕ್ಷಣವೇ ಸ್ಥಳೀಯರು ಸ್ಪಂದಿಸಿ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಗೆ ಮುಂದಾದರು.
ಮಾಹಿತಿ ತಿಳಿದ ಗುಬ್ಬಿ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದೇ ನಿಟ್ಟುಸಿರು ಬಿಡುವ ಸಂಗತಿ.
ಗಾಯಗೊಂಡ ಪ್ರಯಾಣಿಕರಿಗೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ಪರಿಣಾಮವಾಗಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ನಂತರ ಪೊಲೀಸರು ಕ್ರಮ ಕೈಗೊಂಡು ಸಂಚಾರವನ್ನು ಸುಗಮಗೊಳಿಸಿದರು.
ಈ ಘಟನೆ ಹಿನ್ನೆಲೆಯಲ್ಲಿ ವಾಹನಗಳ ನಿರ್ವಹಣೆ ಮತ್ತು ತಾಂತ್ರಿಕ ಪರಿಶೀಲನೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟು ಕೊಂಡು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


