ಕುಣಿಗಲ್: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಕೇವಲ ಅಧಿಕಾರ ಮತ್ತು ಕುರ್ಚಿ ಪೈಪೋಟಿಯಲ್ಲಿ ಮುಳುಗಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಮಾದಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾನೇ ಐದು ವರ್ಷ ಸಿಎಂ ಎನ್ನುತ್ತಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡೂವರೆ ವರ್ಷದ ನಂತರ ತಾನು ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಬೆಂಬಲಿಗರ ಮೂಲಕ ಬಲ ಪ್ರದರ್ಶನ ಮಾಡುತ್ತಾ ಕುರ್ಚಿ ಪೈಪೋಟಿಯಲ್ಲಿ ತೊಡಗಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದೆ. ಆದರೆ ಸರ್ಕಾರಕ್ಕೆ ಇದನ್ನು ಬಗೆಹರಿಸುವ ಆಸಕ್ತಿ ಇಲ್ಲ.ಇನ್ನೊಂದೆಡೆ ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಮತ್ತು ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇವುಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಮಂಜುನಾಥ್ ಅವರು, “ರಾಜ್ಯದಲ್ಲಿ ಮೆಡಿಕಲ್ ಸ್ಟೋರ್ ಗಳಿಗಿಂತ ವೈನ್ ಸ್ಟೋರ್ ಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ವಾರದಲ್ಲಿ ಕನಿಷ್ಠ ಒಂದು ದಿನವಾದರೂ ವೈನ್ ಸ್ಟೋರ್ ಗಳನ್ನು ಕಡ್ಡಾಯವಾಗಿ ಮುಚ್ಚುವಂತಹ ಕಾನೂನು ಜಾರಿಗೆ ಬರಬೇಕು” ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಶಾಸಕ ಮುನಿರತ್ನ, ಮಾಜಿ ಸಚಿವ ಡಿ. ನಾಗರಾಜಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


