ಬೀದರ್: ಔರಾದ್ ತಾಲೂಕಿನ ಶಾಸಕ ಪ್ರಭು ಚವ್ಹಾಣ್ ಅವರು ದಲಿತ ಸಮುದಾಯದ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಮತ್ತು ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಸಣ್ಣತನದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಸುಧಾಕರ್ ಕೊಳ್ಳುರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆಯ ಮೂಲಕ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಔರಾದ್ ಮತ್ತು ಕಮಲನಗರ ತಾಲೂಕಿನ ಹಳ್ಳಿಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನಗಳನ್ನು ಮಂಜೂರು ಮಾಡಿಸಿದ್ದೇನೆ ಎಂದು ಶಾಸಕರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಮುದಾಯ ಭವನ ಮಂಜೂರು ಮಾಡಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಶಾಸಕರು, ಅದಕ್ಕೆ ಸಂಬಂಧಿಸಿದ ಅಧಿಕೃತ ಮಂಜೂರಾತಿ ಆದೇಶ ಪತ್ರವನ್ನು ಬಹಿರಂಗಪಡಿಸಲಿ ಎಂದು ಕೊಳ್ಳುರ್ ಸವಾಲು ಹಾಕಿದ್ದಾರೆ.
ಶಾಸಕರು ಇಲಾಖೆಯ ಮೇಲೆ ಒತ್ತಡ ಹೇರಿ ಗ್ರಾಮ ಪಂಚಾಯಿತಿಗಳಿಗೆ ಪತ್ರ ಬರೆಸುತ್ತಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಗ್ರಾಮಗಳಲ್ಲಿ ಗೊಂದಲ ಸೃಷ್ಟಿಸಿ, ಜಾಗ ನೀಡುವಂತೆ ದಲಿತರನ್ನು ಒತ್ತಾಯಿಸುತ್ತಾ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.
ದಲಿತ ಓಣಿಗಳಲ್ಲಿ ಇಂದಿಗೂ ಕುಡಿಯುವ ನೀರು, ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆಗಳಿಲ್ಲ. ದಲಿತರ ಅಭಿವೃದ್ಧಿಗಾಗಿ ಇರುವ SCP ಮತ್ತು TSP ಅನುದಾನವನ್ನು ಶಾಸಕರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.
ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿದ್ದರೂ ದಲಿತರ ಅಭಿವೃದ್ಧಿಯ ಬಗ್ಗೆ ಶಾಸಕರು ಎಂದೂ ಸೊಲ್ಲೆತ್ತಿಲ್ಲ. ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಎಡ ಮತ್ತು ಬಲ ಸಮುದಾಯದವರಿಗೆ ಟಿಕೆಟ್ ನೀಡದೆ ವಂಚಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಈ ಸಮುದಾಯಗಳಿಗೆ ಸಿಕ್ಕ ಸೌಲಭ್ಯಗಳ ಅಂಕಿ–ಅಂಶಗಳನ್ನು ನೋಡಿದರೆ ಶಾಸಕರ ದಲಿತ ವಿರೋಧಿ ನೀತಿ ತಿಳಿಯುತ್ತದೆ ಎಂದು ಕಿಡಿಕಾರಿದ್ದಾರೆ.
ಕೇವಲ ರಾಜಕೀಯ ಕಾರಣಕ್ಕಾಗಿ ತಾನು ಅಂಬೇಡ್ಕರ್ ಅನುಯಾಯಿ ಎಂದು ಶಾಸಕರು ಸುಳ್ಳು ಹೇಳುತ್ತಿದ್ದಾರೆ. ಜನರ ದಾರಿ ತಪ್ಪಿಸುವುದನ್ನು ನಿಲ್ಲಿಸಿ, ವಾಸ್ತವದ ಬಗ್ಗೆ ಸ್ಪಷ್ಟೀಕರಣ ನೀಡಲಿ ಎಂದು ಸುಧಾಕರ್ ಕೊಳ್ಳುರ್ ಒತ್ತಾಯಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


