ರಾಯಚೂರು: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ತೀವ್ರ ಬಿಸಿಲಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ದಾರುಣ ಘಟನೆ ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹುಸೇನಪ್ಪ ಮಡಿವಾಳ್ (45) ಎಂದು ಗುರುತಿಸಲಾಗಿದೆ. ಇವರು ಉದ್ಯೋಗ ಖಾತ್ರಿ (MGNREGA) ಯೋಜನೆಯಡಿ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನದ ವೇಳೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ, ದಾರಿಯಲ್ಲಿ ಹಠಾತ್ತನೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಮತ್ತು ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ತಾಪಮಾನ ವಿಪರೀತವಾಗಿದ್ದು, ಬಿಸಿಲಿನ ಬೇಗೆ ತಾಳಲಾರದೆ ಹುಸೇನಪ್ಪ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಿಸಿಲಿನಿಂದಾಗಿ ರಕ್ತದೊತ್ತಡ (Low BP) ಕಡಿಮೆಯಾಗಿ ಅವರು ಕುಸಿದು ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರವಾದ ಕಾರಣವೇನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ರಾಯಚೂರು ಭಾಗದಲ್ಲಿ ಸೂರ್ಯನ ಪ್ರಖರತೆ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಮಧ್ಯಾಹ್ನದ ವೇಳೆ ಹೊರಬರದಂತೆ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


