ಧಾರವಾಡ: ನಗರದಲ್ಲಿ ಪೊಲೀಸರ ಕಿರುಕುಳ ಮತ್ತು ಹಣದ ಬೇಡಿಕೆಗೆ ಮನನೊಂದು ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ಸಂಬಂಧ ಕರ್ತವ್ಯ ಲೋಪ ಹಾಗೂ ಕಿರುಕುಳದ ಆರೋಪದ ಮೇಲೆ ವಿದ್ಯಾಗಿರಿ ಠಾಣೆಯ ಮೂವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೃತ ವಿದ್ಯಾರ್ಥಿಯನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೇಲೂರು ಗ್ರಾಮದ ಆದಿತ್ಯ ಮ್ಯಾಗೇರಿ (20) ಎಂದು ಗುರುತಿಸಲಾಗಿದೆ. ಈತ ಧಾರವಾಡದ ಕಿಟೆಲ್ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದನು. ಏಪ್ರಿಲ್ 25ರಂದು ವಿದ್ಯಾಗಿರಿ ಪೊಲೀಸರು ನಡೆಸಿದ ಗಾಂಜಾ ವಿರೋಧಿ ಕಾರ್ಯಾಚರಣೆಯ ವೇಳೆ ಆದಿತ್ಯ ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿತ್ತು.
ವೈದ್ಯಕೀಯ ಪರೀಕ್ಷೆಯಲ್ಲಿ ಆದಿತ್ಯ ಗಾಂಜಾ ಸೇವಿಸಿಲ್ಲ ಎಂಬುದು ದೃಢಪಟ್ಟಿತ್ತು (ನೆಗೆಟಿವ್ ಬಂದಿತ್ತು). ಆದರೂ, ಪೊಲೀಸರು ಆತನನ್ನು ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ. ಮೊದಲು 10,000 ರೂ. ಕೇಳಿದ್ದ ಪೊಲೀಸರು, ನಂತರ 2,000 ರೂ. ನೀಡುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ.
ಈ ವಿಚಾರವಾಗಿ ಆದಿತ್ಯ ತನ್ನ ತಾಯಿಗೆ ಕರೆ ಮಾಡಿ ಹಣಕ್ಕಾಗಿ ಕೇಳಿದ್ದನು. ಬಡತನದ ಹಿನ್ನೆಲೆಯ ಆತನ ತಾಯಿ ತಕ್ಷಣ ಹಣ ಹೊಂದಿಸಲು ಅಸಹಾಯಕತೆ ವ್ಯಕ್ತಪಡಿಸಿದ್ದರು. ಪೊಲೀಸರ ಬೆದರಿಕೆ ಹಾಗೂ ಅವಮಾನದಿಂದ ನೊಂದ ಆದಿತ್ಯ, ಸೋಮವಾರ ರಾತ್ರಿ ತನ್ನ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಸಂಬಂಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ತನಿಖೆಗೆ ಆದೇಶಿಸಿದ್ದರು. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಸ್ತುತ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಈ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ಅಮಾಯಕ ವಿದ್ಯಾರ್ಥಿಯ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


