ತುಮಕೂರು: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನ ಋತುಮಾನ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಜಿಲ್ಲೆಯಾದ್ಯಂತ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಹಾಗೂ ತುರ್ತು ಕ್ರಮಗಳ ಕುರಿತು ಚರ್ಚಿಸಲಾಯಿತು.
ಜಿಲ್ಲಾಧಿಕಾರಿಗಳು ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಲಭ್ಯತೆ ಖಚಿತಪಡಿಸಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸುವುದರ ಜೊತೆಗೆ, ಸರ್ಕಾರಿ ವಸತಿ ನಿಲಯಗಳು ಹಾಗೂ ಹಾಸ್ಟೆಲ್ ಗಳಲ್ಲಿ ಕುಡಿಯುವ ನೀರಿನ ಮಾದರಿಗಳನ್ನು ಪರಿಶೀಲಿಸಿ, ಕ್ಲೋರಿನೇಷನ್ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ತಿಳಿಸಲಾಯಿತು.
ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗದಂತೆ ಚರಂಡಿ ಮತ್ತು ತ್ಯಾಜ್ಯ ವಿಲೇವಾರಿ ಪ್ರದೇಶಗಳ ಸ್ವಚ್ಛತೆ, ಕ್ಲೀನಿಂಗ್ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಲುಷಿತ ನೀರು ಕುಡಿಯುವ ನೀರಿನ ಮೂಲಗಳಿಗೆ ಸೇರ್ಪಡೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಲ್ಲಾ ತಹಶೀಲ್ದಾರರು, ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಎಲ್ಲರೂ ಕೇಂದ್ರ ಸ್ಥಾನದಲ್ಲಿ ಇರಬೇಕು. ಮಳೆ ಮುನ್ಸೂಚನೆ ಇರುವುದರಿಂದ ಏನಾದರೂ ಅನಾಹುತಗಳಾದರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನ ವರದಿಯನ್ನು ಮುಂದಿನ ಪ್ರಾಧಿಕಾರಕ್ಕೆ ಕಳುಹಿಸಿಕೊಡಲು ಸೂಚಿಸಿದರು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಮುಂಗಾರು ಅವಧಿಯಲ್ಲಿ ಸಾರ್ವಜನಿಕ ಸುರಕ್ಷತೆ, ಆರೋಗ್ಯ ಹಾಗೂ ಮೂಲಸೌಕರ್ಯ ಸಂರಕ್ಷಣೆಗಾಗಿ ಇಲಾಖಾವಾರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಕರೆ ನೀಡಿದರು.
ಮಳೆಯಿಂದ ಉಂಟಾಗುವ ಹಾನಿಗಳ ಕುರಿತು ತಾಲ್ಲೂಕುವಾರು ಮಾಹಿತಿ ಸಂಗ್ರಹಿಸಿ, ಮಾನವ ಹಾನಿ, ಜಾನುವಾರು ಹಾನಿ, ಮನೆ ಹಾನಿ ಸೇರಿದಂತೆ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಗಳ ವಿವರಗಳನ್ನು ತ್ವರಿತವಾಗಿ ದಾಖಲಿಸಿ ಪರಿಹಾರ ಕ್ರಮ ಕೈಗೊಳ್ಳಿ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೂಚಿಸಿದರು. ಈ ಕುರಿತಂತೆ ಜಿಲ್ಲಾ ಸಹಾಯವಾಣಿ ಸಂಖ್ಯೆ 7304975519, 0816-2213402 ಕ್ಕೆ ತುರ್ತು ಸಂದರ್ಭದಲ್ಲಿ ಕರೆ ಮಾಡಲು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ್, ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ಡಿಎಚ್ ಒ ಡಾ. ಚಂದ್ರಶೇಖರ್ ಮತ್ತು ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


