ಬೀದರ್: ಜಿಲ್ಲೆಯ ಮಹಿಳೆಯರು, ಮಕ್ಕಳು ಮತ್ತು ವಿದ್ಯಾರ್ಥಿ/ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ವಿಶೇಷವಾಗಿ ರಚನೆಗೊಂಡಿರುವ ಜಿಲ್ಲಾ ಪೊಲೀಸ್ ಇಲಾಖೆಯ ಹೆಮ್ಮೆಯ “ಅಕ್ಕ ಪಡೆ” ಈಗ ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳು ಹಾಗೂ ಕಾನೂನು ಅರಿವು ಮೂಡಿಸುವ ಮೂಲಕ ವಿಶೇಷ ಗಮನ ಸೆಳೆದಿದೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಪ್ರದೀಪ್ ಗುಂಟಿ (ಐ.ಪಿ.ಎಸ್.) ಅವರು ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಕುರಿತು ವಿಶೇಷ ಮುತುವರ್ಜಿ ವಹಿಸಿ ನೀಡಿದ್ದ ಟಾಸ್ಕ್ ಹಿನ್ನೆಲೆಯಲ್ಲಿ, ಮಾನ್ಯರ ನೇರ ಮಾರ್ಗದರ್ಶನ ಮತ್ತು ನಿರ್ದೇಶನದಂತೆ ಚಿಟಗುಪ್ಪಾ ತಾಲೂಕಿನ ಅಕ್ಕ ಪಡೆಯು ಸಿಂದನಕೇರಾ ಗ್ರಾಮದಲ್ಲಿ ಹಿರಿಯ ನಾಗರಿಕರಿಗೆ ಹಾಗೂ ಯುವಕರಿಗೆ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅಕ್ಕ ಪಡೆಯ ಕಾರ್ಯವೈಖರಿಯನ್ನು ಪರಿಚಯಿಸಿದ ಸಿಬ್ಬಂದಿ, ರಸ್ತೆ ಸುರಕ್ಷತೆಯ ಬಗ್ಗೆ ವಿಸ್ತಾರವಾಗಿ ಅರಿವು ಮೂಡಿಸಿದರು. ಹದಿನೆಂಟು ವರ್ಷದ ಒಳಗಿನ ಮಕ್ಕಳಿಗೆ ಯಾವುದೇ ಕಾರಣಕ್ಕೂ ವಾಹನ ಚಲಾಯಿಸಲು ನೀಡಬಾರದು ಎಂದು ಎಚ್ಚರಿಸಿದ ಅವರು, ದ್ವಿಚಕ್ರ ವಾಹನ ಚಲಾಯಿಸುವಾಗ ತಪ್ಪದೇ ಹೆಲ್ಮೆಟ್ ಹಾಗೂ ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸುವುದರ ಮಹತ್ವವನ್ನು ತಿಳಿಸಿಕೊಟ್ಟರು. ಅಲ್ಲದೆ, ಸಾರ್ವಜನಿಕರು ಈ ನಿಯಮಗಳನ್ನು ತಾವಷ್ಟೇ ಪಾಲಿಸುವುದಲ್ಲದೆ ತಮ್ಮ ಅಕ್ಕಪಕ್ಕದ ಮನೆಯವರಿಗೂ ತಿಳಿ ಹೇಳಿ ಜವಾಬ್ದಾರಿಯುತ ನಾಗರಿಕರಾಗಿ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಇದರೊಂದಿಗೆ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ (POCSO) ಕಾಯ್ದೆಯಡಿ ಲಭ್ಯವಿರುವ ಮಹಿಳಾ ಸುರಕ್ಷತಾ ನಿಯಮಗಳ ಕುರಿತು ಗ್ರಾಮೀಣ ಭಾಗದ ಜನರಿಗೆ ಮನವರಿಕೆ ಮಾಡಿಕೊಡಲಾಯಿತು. ಇಂದಿನ ದಿನಗಳಲ್ಲಿ ಮಕ್ಕಳು ಅತಿಯಾಗಿ ಮೊಬೈಲ್ ಬಳಕೆ ಮಾಡುವುದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಎಚ್ಚರಿಕೆ ನೀಡಿದ ಅಕ್ಕ ಪಡೆಯು, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗಾಗಿ ಇರುವ ಮಕ್ಕಳ ಸಹಾಯವಾಣಿ ಸಂಖ್ಯೆ 1098, ತುರ್ತು ಪೊಲೀಸ್ ಸಹಾಯವಾಣಿ ಸಂಖ್ಯೆ 112 ಹಾಗೂ ಸೈಬರ್ ಅಪರಾಧ ಸಹಾಯವಾಣಿ ಸಂಖ್ಯೆ 1930 ಗಳ ಬಳಕೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿತು.
ನಾವು ಸದಾ ನಿಮ್ಮ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಭಯ ಪಡುವ ಅವಶ್ಯಕತೆ ಇಲ್ಲ, ನಾವು ಸದಾ ನಿಮ್ಮೊಂದಿಗೆ ಇರುತ್ತೇವೆ ಎಂದು ಧೈರ್ಯ ತುಂಬುವ ಮೂಲಕ ಮಹಿಳೆಯರಲ್ಲಿ ಮತ್ತು ವಿದ್ಯಾರ್ಥಿನಿಯರಲ್ಲಿ ಸಕಾರಾತ್ಮಕ ಭಾವನೆಯನ್ನು ಮೂಡಿಸಲಾಯಿತು. ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿ ಸಮೂಹಕ್ಕೆ 24×7 ನಿರಂತರ ಸುರಕ್ಷತೆ ಒದಗಿಸುತ್ತಿರುವ ಅಕ್ಕ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಈ ಜನಪರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಅವರು ಮುಕ್ತಕಂಠದಿಂದ ಶ್ಲಾಘಿಸಿ, ಅಭಿನಂದಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


