ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಳವಾಯಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಪರದಾಡುವಂತಾಗಿದೆ.
ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಈ ಬಗ್ಗೆ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ತೊಂದರೆಯಾಗಿದೆ.
ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ಧೋರಣೆಯಿಂದ ಬೇಸತ್ತ ವಕೀಲರು ಹಾಗೂ ಭಾರತೀಯ ಪರಿವರ್ತನ ಸಂಘ–BPS ರಾಜ್ಯಾಧ್ಯಕ್ಷರಾದ ಪ್ರೊ. ಹರಿರಾಮ್ ಎ. ರವರು ಸ್ವತಃ ಮುಂದೆ ನಿಂತು ಪರಿಹಾರ ಕಲ್ಪಿಸಿದ್ದಾರೆ. ಗ್ರಾಮದ BPS ಮುಖಂಡ ಅಂಜಿ ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಟ್ಯಾಂಕರ್ ಮೂಲಕ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಪೂರೈಸಿದ್ದಾರೆ.
“ಮನವಿ ಕೊಟ್ಟು ಸುಸ್ತಾದೆವು. ಅಧಿಕಾರಿಗಳು ಸ್ಥಳಕ್ಕೆ ಬಂದು ನೋಡುವ ಸೌಜನ್ಯವೂ ತೋರಲಿಲ್ಲ. BPS ಸಂಘದವರು ಬಂದು ನೀರು ಕೊಟ್ಟಿದ್ದರಿಂದ ಸದ್ಯಕ್ಕೆ ಉಸಿರಾಡುವಂತಾಗಿದೆ” ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
ಟ್ಯಾಂಕರ್ ನೀರು ತಾತ್ಕಾಲಿಕ ಪರಿಹಾರ ಮಾತ್ರ. ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತ ಕೂಡಲೇ ಎಚ್ಚೆತ್ತು ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರೊ. ಹರಿರಾಮ್ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


