ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಮೇ 24 ರಂದು ನಡೆದ ಎಸ್ ಐಆರ್ (SIR) ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದ್ದು, ಯೋಜನೆಗಳಲ್ಲಿ ಪಾರದರ್ಶಕತೆ ತರಲು ಮತ್ತು ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ಸಿಗುವಂತೆ ಮಾಡಲು ಸಮಗ್ರ ಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ ಅಂತಾ ವರದಿಗಳಿಂದ ತಿಳಿದು ಬಂದಿದೆ.
ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಮಹಿಳೆಯರ ಹೆಸರಿನಲ್ಲಿಯೂ ಹಣ ಸಂದಾಯವಾಗುತ್ತಿರುವ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದು ಸರ್ಕಾರಿ ಹಣದ ದುರುಪಯೋಗಕ್ಕೆ ಕಾರಣವಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡುವ ಉದ್ದೇಶದಿಂದ ಜಾರಿಗೆ ತಂದ ಈ ಯೋಜನೆಗಳ ಲಾಭವನ್ನು ತೆರಿಗೆ ಪಾವತಿದಾರರು (Tax payers) ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಅವರನ್ನು ಈ ಪಟ್ಟಿಯಿಂದ ಹೊರಗಿಡಲು ಚಿಂತಿಸಲಾಗಿದೆ.
ಒಂದೇ ಮನೆಯಲ್ಲಿ ಇಬ್ಬಿಬ್ಬರು ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯುತ್ತಿರುವ ಅಕ್ರಮಗಳು ಸಹ ಪತ್ತೆಯಾಗಿದ್ದು, ಇಂತಹ ಪ್ರಕರಣಗಳನ್ನು ಕೈಬಿಡಲು ನಿರ್ಧರಿಸಲಾಗಿದೆ.
ಪ್ರಸ್ತುತ ರಾಜ್ಯದಲ್ಲಿ ಸುಮಾರು 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಈ ಬೃಹತ್ ಪಟ್ಟಿಯನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುವುದು. ಹೊಸದಾಗಿ ರೂಪಿಸಲಾಗುವ ನಿಯಮಾವಳಿಗಳು (Guidelines) ಮತ್ತು ಷರತ್ತುಗಳ ಆಧಾರದ ಮೇಲೆ ಅನರ್ಹರನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ.
ಈ ಯೋಜನೆಗೆ ಸಂಬಂಧಿಸಿದ ಹೊಸ ಮಾರ್ಗಸೂಚಿಗಳನ್ನು ಸರ್ಕಾರ ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆಯಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


