ಕುಕ್ಕೆ ಸುಬ್ರಹ್ಮಣ್ಯ: ರಾಜ್ಯದಲ್ಲಿ ನದಿಗಳ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ನದಿಗಳಿಗೆ ಸಂಸ್ಕರಿಸದ ತ್ಯಾಜ್ಯ ನೀರನ್ನು ನೇರವಾಗಿ ಹರಿಸಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಮಂಗಳವಾರ ಖಡಕ್ ಸೂಚನೆ ನೀಡಿದ್ದಾರೆ.
ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕುಮಾರಧಾರಾ ನದಿಗೆ ಸಂಸ್ಕರಿಸದ ತ್ಯಾಜ್ಯವನ್ನು ನೇರವಾಗಿ ಹರಿಯಬಿಡುತ್ತಿರುವವರ ಮೇಲೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ತಿಳಿಸಿದರು.
ಸ್ಥಳೀಯ ಸಂಸ್ಥೆಗಳು ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಮಲಿನ ಹಾಗೂ ತ್ಯಾಜ್ಯ ಜಲ ಸಂಸ್ಕರಣಾ ಘಟಕಗಳನ್ನು (STP) ನಿರಂತರವಾಗಿ ಪರಿಶೀಲನೆ ನಡೆಸಬೇಕು. ಯಾರಾದರೂ ಮೊದಲ ಬಾರಿಗೆ ಸಂಸ್ಕರಿಸದ ತ್ಯಾಜ್ಯವನ್ನು ನದಿಗೆ ಬಿಟ್ಟಿದ್ದರೆ ಅವರಿಗೆ ಆರಂಭಿಕ ಎಚ್ಚರಿಕೆ ನೀಡಬೇಕು. ಆದಾಗ್ಯೂ, ಪದೇ ಪದೇ ಇದೇ ತಪ್ಪು ಮುಂದುವರಿಸಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸಚಿವರು ಸ್ಪಷ್ಟಪಡಿಸಿದರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವಾಗ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಬಾಟಲಿಗಳು ಮತ್ತು ತಟ್ಟೆಗಳು ಬಿದ್ದಿರುವುದನ್ನು ಕಂಡು ಸಚಿವರು ತೀವ್ರ ಆತಂಕ ವ್ಯಕ್ತಪಡಿಸಿದರು. ತಕ್ಷಣವೇ ಅಧಿಕಾರಿಗಳ ಸಭೆ ನಡೆಸಿದ ಅವರು, ಕ್ಷೇತ್ರದಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ ಎರಡು ಹಂತದ ಕಟ್ಟುನಿಟ್ಟಿನ ಪ್ಲಾಸ್ಟಿಕ್ ತಪಾಸಣೆ ನಡೆಸುವಂತೆ ನಿರ್ದೇಶನ ನೀಡಿದರು.
ಕ್ಷೇತ್ರಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಅವರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಮಾನವನ ಜೀವ ಅತ್ಯಮೂಲ್ಯವಾಗಿದ್ದು, ಒಂದೇ ಒಂದು ಪ್ರಾಣಹಾನಿಯೂ ಸಂಭವಿಸಬಾರದು. ಚಿರತೆ ಹಾವಳಿ ಇರುವ ಪ್ರದೇಶಗಳಲ್ಲಿ ಹೆಚ್ಚಿನ ಬೋನುಗಳನ್ನು ಇರಿಸಲು ಹಾಗೂ ಆನೆಗಳು ಬರದಂತೆ ಕಂದಕ ಕಾಮಗಾರಿ ಪೂರ್ಣಗೊಳಿಸಿ ಸೌರ ತಂತಿ ಬೇಲಿ ಅಳವಡಿಸಲು ಸೂಚಿಸಲಾಗಿದೆ. ವನ್ಯಜೀವಿಗಳ ಸಂಚಾರದ ಮೇಲೆ ಕಣ್ಣಿಡಲು ಡ್ರೋನ್ ಸೇರಿದಂತೆ ಅತ್ಯಾಧುನಿಕ ಉಪಕರಣಗಳನ್ನು ಬಳಸಲಾಗುತ್ತಿದ್ದು, ಇದಕ್ಕಾಗಿ ಕಮಾಂಡ್ ಸೆಂಟರ್ ತೆರೆಯಲಾಗಿದೆ ಎಂದರು.
ರಾಜ್ಯದಲ್ಲಿ ಡೀಮ್ಡ್ ಅರಣ್ಯ ಭೂಮಿಗೆ ಸಂಬಂಧಿಸಿದ ಗೊಂದಲಗಳನ್ನು ಬಗೆಹರಿಸಲು ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೆ ನಡೆಸಲಾಗುತ್ತಿದೆ. ಈ ಹಿಂದೆ 2022 ರಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾದ ಪ್ರಮಾಣ ಪತ್ರದಲ್ಲಿ 3.33 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಎಂದು ಉಲ್ಲೇಖಿಸಲಾಗಿದೆ. ಆದರೆ, ಇದರಲ್ಲಿ ಅಂಗನವಾಡಿ, ಸರ್ಕಾರಿ ಆಸ್ಪತ್ರೆ ಹಾಗೂ ಪಟ್ಟಾ ಭೂಮಿಗಳೂ ಸೇರಿವೆ. ಕಂದಾಯ ಇಲಾಖೆಯಲ್ಲಿ ಸರ್ವೇಯರ್‌ಗಳ ಕೊರತೆ ಇರುವುದರಿಂದ, ಅರಣ್ಯ ಜಂಟಿ ಸರ್ವೆಗಾಗಿಯೇ ವಿಶೇಷ ಸಿಬ್ಬಂದಿ ನಿಯೋಜಿಸುವಂತೆ ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ನಾಯಕರು ದೆಹಲಿಗೆ ತೆರಳಿದ್ದಾರೆ ಎಂದು ಸ್ಪಷ್ಟಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


